ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಜನತೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ನಂಜನಗೂಡು ಉಪ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ, ಬಿಜೆಪಿಯ ಯಾವ ಅಲೆಯೂ ನಡೆದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನತೆ ಮತ ನೀಡಿದ್ದಾರೆ ಎಂದರು.
ಚುನಾವಣೆ ಪ್ರಕ್ರಿಯೆ ಆರಂಭವಾದ ಮೊದಲ ದಿನದಿಂದಲೂ ನನಗೆ 10 ರಿಂದ 15 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿತ್ತು. ಆದರೆ, ಕ್ಷೇತ್ರದ ಜನತೆ 21 ಸಾವಿರ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಇನ್ನೂ ಹೆಚ್ಚಿನ ಪುಷ್ಟಿ ನೀಡಿದ್ದಾರೆ.
ಹಿಂದಿನ ಅವಧಿಯಲ್ಲಿ ಪಂಜರದ ಗಿಳಿಯಂತಾಗಿದ್ದ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಇದೀಗ ಪಂಜರದಿಂದ ಹೊಸಬಂದು ಹೊಸ ಹುರುಪಿನಿಂದ ಪಕ್ಷದ ಅಭ್ಯರ್ಥಿ ಗೆಲುವಿಗೆ ದುಡಿದಿದ್ದಾರೆ. ಕ್ಷೇತ್ರದ ಜನತೆ ಕೂಡ 6 ತಿಂಗಳ ಅಭಿವೃದ್ಧಿ ನೋಡಿ, ಕೋಮುವಾದವನ್ನು ಹಿಮ್ಮೆಟ್ಟಿಸಿ ಮತ್ತೆ ಕಾಂಗ್ರೆಸ್ ಬೆಂಬಲಿಸಿದ್ದಾರೆ.
ಉಪ ಚುನಾವಣೆಯ ಈ ಫಲಿತಾಂಶ ಮುಂಬರುವ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ. ಆದರೆ, 2018ರ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೇವೆ. ರಾಜಾದ್ಯಂತ ಜನರನ್ನು ಕೋಮುಶಕ್ತಿಗಳ ವಿರುದ್ಧ ಸಂಘಟಿಸಿ 2018ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ ಎಂದರು.
ಯಾವುದೇ ಜಾತಿಗೆ ನಾನೇ ಸಾರ್ವಭೌಮ ಎಂದು ಹೇಳಿಕೊಳ್ಳಲು ಯಾರಿಗೂ ಜನ ಪೇಟೆಂಟ್ ಕೊಟ್ಟಿಲ್ಲ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿದ್ದಾರೆ ಎಂದು ಪರೋಕ್ಷವಾಗಿ ಶ್ರೀನಿವಾಸಪ್ರಸಾದ್‌ರನ್ನು ಟೀಕಿಸಿದ ಮಹದೇವಪ್ಪ, ಚುನಾವಣೆಗೂ ಅಭಿವೃದ್ಧಿಗೂ ಯಾವುದೇ ಸಂಬಂಧವಿಲ್ಲ.
ಆರು ತಿಂಗಳ ಹಿಂದೆ ನಂಜನಗೂಡು ಕ್ಷೇತ್ರದಲ್ಲಿ ಆರಂಭಿಸಿರುವ ಅಭಿವೃದ್ಧಿ ಪರ್ವ ಮುಂದುವರಿಯಲಿದೆ. ಪಕ್ಷದ ಅಭ್ಯರ್ಥಿಗೆ ಮತ ನೀಡಿದ ಕ್ಷೇತ್ರದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.