ಕುದೂರು: ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಬೇಕು ಎನ್ನುವ ಸರಕಾರದ ಆಶಯದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅಯೋಜಿಸಿದ್ದು, ಇಂದು ಅಧಿಕಾರಿಗಳು ಗ್ರಾಮದ ಮತ್ತು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಮಾಗಡಿ ತಾಲ್ಲೂಕಿನಲ್ಲಿ ಕುದೂರು ಹೋಬಳಿಯ ಸುಗ್ಗನಹಳ್ಳಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿ, ಆಶ್ರಯ ಯೋಜನೆ, ಪೌತಿ ಖಾತೆ, ಸ್ಮಶಾನ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡ್ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಇನ್ನಿತರೆ ಗ್ರಾಮದ ಸಮಸ್ಯೆಗಳ ಕುರಿತು ಅರ್ಜಿ ನೀಡಿದಲ್ಲಿ ಪರಿಹರಿಸಲಾಗುವುದು ಪರಿಹರಿಸಲಾಗದ ಅರ್ಜಿಯನ್ನು ಕಾಲಮಿತಿಯಲ್ಲಿ ಪರಿಹರಿಸಲು ಒತ್ತು ನೀಡಲಾಗುವುದು ಎಂದರು.
ಮಾಗಡಿ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿ ಗ್ರಾಮ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಿ ಕಾರ್ಯಕ್ರಮದ ಪೂರ್ಣ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ವಿವಿಧ ಇಲಾಖೆಗಳಿಂದ ಜಾಗೃತಿ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ತಂಬಾಕು ನಿಯಂತ್ರಣ ಕಾರ್ಯಕ್ರಮ, ಮಲೇರಿಯಾ, ಡೆಂಗ್ಯೂ ತಡೆಗಟ್ಟಲು ತೆಗೆದುಕೊಳ್ಳಬಹುದಾದ ಕ್ರಮಗಳು, ಮೆದುಳು ಜ್ವರ, 2025ರ ವೇಳೆಗೆ ಕ್ಷಯರೋಗ ನಿರ್ಮೂಲನೆ ಮಾಡುವ ಗುರಿ, ಬಾಯಿ ಆರೋಗ್ಯ ಶಿಬಿರ, ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಮತ್ತು ತಡೆಗಟ್ಟುವ ಕಾರ್ಯಕ್ರಮ, ಕುಟುಂಬ ಕಲ್ಯಾಣ ಯೋಜನಾ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು ಅರ್ಹರಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಡಿ.ಡಿ.ಎಲ್.ಆರ್ ಸಂತೋಷ್, ಉಪ ತಹಶೀಲ್ದಾರ್ ಸೋಮಶೇಖರ್, ಎ.ಡಿ.ಎಲ್.ಆರ್ ಪರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷರಾದ ಮಮತಾ , ವಿವಿಧ ಇಲಾಖೆಯ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.