ಬೆಂಗಳೂರು: ಸುಪ್ರೀಂಕೋರ್ಟ್ ಆದೇಶ ಉಲ್ಲಂ ಸಿ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಮಂಡಿಸಿದರೆ, ರಾಜ್ಯ ವಿಧಾನಸಭೆ ಚುನಾವಣಾ ವೇಳೆ ಸರ್ಕಾರದ ವಿರುದ್ಧ ಮತಚಲಾಯಿಸಲು ಚಿಂತನೆ ನಡೆಸಲಾಗುವುದು ಎಂದು ಅಹಿಂಸಾ ನೌಕರರ ಸಂಘ ಎಚ್ಚರಿಕೆ ನೀಡಿದೆ.
ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಜಾರಿ ಮಾಡುವಂತೆ ಒತ್ತಾಯಿಸಿ ಅರಮನೆ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾವೇಶಕ್ಕೂ ಮುನ್ನ ನಗರದ ಫ್ರೀಡಂಪಾರ್ಕ್‌ನಿಂದ ಅರಮನೆ ಮೈದಾನದ ತನಕ ಅಹಿಂಸಾ(ಅಲ್ಪಸಂಖ್ಯಾತ, ಹಿಂದುಳಿದ, ಸಾಮಾನ್ಯ ವರ್ಗ) ನೇತೃತ್ವದಲ್ಲಿ ಬೃಹತ್ ರ್ಯಾಲಿ ನಡೆಯಿತು.
ಸಾಮಾಜಿಕ ನ್ಯಾಯದ ಅಡಿಯಲ್ಲಿ ಸುಪ್ರೀಂಕೋರ್ಟ್ ಬಡ್ತಿ ಮೀಸಲಾತಿ ತೀರ್ಪು ನೀಡಿದೆ. ಇದು ಸಂವಿಧಾನದ ಆಶಯಕ್ಕೆ ಪೂರಕವಾಗಿದ್ದು, ಯಾರಿಗೂ ಇದರಿಂದ ಅನ್ಯಾಯವಾಗುವುದಿಲ್ಲ. ರಾಜ್ಯ ಸರ್ಕಾರ ನ್ಯಾಯಾಲಯದ ತೀರ್ಪನ್ನು ಜಾರಿಗೊಳಿಸದಿದ್ದರೆ 8 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸುವ ವಿಷಯವಾಗಿ ಚರ್ಚೆ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದಾರೆ.
ಅಹಿಂಸಾ ಅಧ್ಯಕ್ಷ ಎಂ.ನಾಗರಾಜ್ ಮಾತನಾಡಿ, ನ.13ರಂದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಮಂಡನೆಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. 1978ರಿಂದ ಮುಂಬಡ್ತಿ ಕ್ರಮವನ್ನು ಕೈಗೊಳ್ಳಲು ಸರ್ಕಾರಕ್ಕೆ ನ್ಯಾಯಾಲಯದ ಸೂಚನೆಯಿದೆ. ಇದನ್ನು ಜಾರಿಗೊಳಿಸದ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ಸುಗ್ರೀವಾಜ್ಞೆ ತರಲು ಮುಂದಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ನೌಕರರು ಹೇಳಿರುವ ಕುಂದುಕೊರತೆಗಳನ್ನು ಸಿಎಂ ಗಮನಕ್ಕೆ ತರಲಾಗುವುದು. ಈ ವೇಳೆ ಅಹಿಂಸಾ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡುತ್ತೇನೆ. ಈ ಬಗ್ಗೆ ಚರ್ಚಿಸಿ, ಮುಖ್ಯಮಂತ್ರಿ ಮತ್ತು ಸಚಿವ ಸಂಪುಟ ಕ್ರಮಕೈಗೊಳ್ಳಲಿದೆ ಎಂದರು.
ಟ್ರಾಫಿಕ್ ಜಾಮ್: ಶುಕ್ರವಾರ ಬೆಳಗ್ಗೆ 11.15ರ ಸುಮಾರಿಗೆ ಫ್ರೀಡಂ ಪಾರ್ಕ್‌ನಿಂದ ಹೊರಟ ರ್ಯಾಲಿ, ಚಾಲುಕ್ಯ ವೃತ್ತ, ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆಯಾಗಿ ತ್ರಿಪುರವಾಸಿನಿ ಸೇರಿದೆ. ರ್ಯಾಲಿಯಲ್ಲಿ ಸಾವಿರಾರು ಜನ ಸೇರಿದ್ದರಿಂದ ಶೇಷಾದ್ರಿ ರಸ್ತೆ, ಅರಮನೆ ರಸ್ತೆ, ರೇಸ್‌ಕೋರ್ಸ್, ಮೌಂಟ್ ಕಾರ್ಮೆಲ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಕೆಲ ಗಂಟೆ ಪರದಾಡಿದರು.