Advertisement

20ರ ಕೋರ್‌ ಕಮಿಟಿ ಸಭೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಅಂತಿಮ

12:30 PM Apr 15, 2017 | |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಕುರಿತು ಏಪ್ರಿಲ್‌ 20 ರಂದು ನಡೆಯಲಿರುವ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪದ್ಮನಾಭನಗರ, ಜಯನಗರ, ದಾಸರಹಳ್ಳಿ, ಮಹಾಲಕ್ಷ್ಮೀ ಲೇಔಟ್‌ ವಿಧಾನಸಭೆ ಕ್ಷೇತ್ರದ ಮುಖಂಡರ ಸಭೆ ನಡೆಸಿದ ನಂತರ ಮಾತನಾಡಿದ ಅವರು,  ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ದೇವೇಗೌಡರಿಗೆ ಕೊಟ್ಟಿದ್ದೇನೆ. ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ ಬಿಡುಗಡೆಗೊಳಿಸಲಿದ್ದಾರೆ ಎಂದು ಹೇಳಿದರು. ಮುಂದಿನ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಜೆಡಿಎಸ್‌ ಸ್ವಂತಂತ್ರವಾಗಿ ಸ್ಪರ್ಧಿಸಲಿದ್ದು ಚುನಾವಣಾ ಪೂರ್ವ ಮೈತ್ರಿ ಇಲ್ಲ ಎಂದು ಹೇಳಿದರು.

“ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿದ್ದಾರೆ. ಹಾಗಾಗಿ, ಮುಖ್ಯಮಂತ್ರಿಯವರು ಧನ್ಯವಾದ ಹೇಳಿದ್ದಾರೆ’ ಎಂದು ತಿಳಿಸಿದರು.

ನಾಗಮಂಗಲದಲ್ಲಿ ಜೆಡಿಎಸ್‌ ಬಂಡಾಯ ಶಾಸಕರ ಸಮಾವೇಶ ಕುರಿತು ಪ್ರತಿಕ್ರಿಯಿಸಿದ ಅವರು, “ಅವರಿಗೆ ಒಳ್ಳೆಯದಾಗಲಿ. ನನ್ನನ್ನು ಬೆಳೆಸಿ ತಪ್ಪು ಮಾಡಿದೆವು ಎಂದು ಅವರು ಹೇಳಿದ್ದಾರೆ. ಅದಕ್ಕೆ ವೈಯಕ್ತಿಕವಾಗಿ ನನ್ನ ಕೃತಜ್ಞತೆ’ ಎಂದು ವ್ಯಂಗ್ಯವಾಡಿದರು.

ಸಂವಾದ ಇಂದು
ಬಿಬಿಎಂಪಿ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆಯನ್ನು ಪಕ್ಷದ ಕಚೇರಿಯಲ್ಲಿ ಮುಂದಿನ 8 ದಿನಗಳ ಕಾಲ ನಿರಂತರವಾಗಿ ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಸಾಮಾಜಿಕ ಜಾಲತಾಣಗಳ ಫಾಲೋವರ್ಸ್‌ಜತೆ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಂವಾದ ಆಯೋಜಿಸಲಾಗಿದ್ದು, ಇಡೀದಿನ ಕಾರ್ಯಕ್ರಮ ನಡೆಯಲಿದೆ.

Advertisement

ಭಾನುವಾರ ಮತ್ತು ಸೋಮವಾರ ಪಕ್ಷದ ಕಚೇರಿಯಲ್ಲಿ ಮುಖಂಡರ ಸಭೆ ನಿಗದಿಯಾಗಿದ್ದು, ಮಂಗಳವಾರ ಎತ್ತಿನಹೊಳೆ ಕಾಮಗಾರಿ ಪ್ರದೇಶಕ್ಕೆ ಭೇಟಿ ಆನಂತರ ಮೂರು ದಿನ ಮುಖಂಡರ  ಸಭೆ ಏರ್ಪಡಿಸಲಾಗಿದೆ. ಏಪ್ರಿಲ್‌ ಕೊನೇ ವಾರದಲ್ಲಿ ಹುಬ್ಬಳ್ಳಿ ಸೇರಿ ಉತ್ತರ ಕರ್ನಾಟಕ ಪ್ರವಾಸ ಹಮ್ಮಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next