ಬೆಳಗಾವಿ: ಜಿಲ್ಲೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಗ್ರಾಹಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಪಡೆದ ವಸ್ತುಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ತಕ್ಷಣ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರು ನೀಡಿ ನ್ಯಾಯ ಪಡೆದುಕೊಳ್ಳಬಹದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗುರುವಾರ ನಡೆದ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ. ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಯಾವುದಾದರೂ ಸಮಸ್ಯೆಗಳು ಕಂಡುಬಂದರೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಸಂಪರ್ಕಿಸಬೇಕು ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷೆ ಸುನಂದಾ ಕಾದೊಳ್ಳಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಚ್ಚಿನ ಬಡ್ಡಿಯ ಆಸೆಯಿಂದಾಗಿ ಸೊಸೈಟಿಗಳಿಂದ ಗ್ರಾಹಕರು ವಂಚನೆಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಪ್ಪಿಸಲು ಗ್ರಾಹಕ ಸಂರಕ್ಷಣಾ ಕಾಯ್ದೆ ಬಗ್ಗೆ ಗ್ರಾಹಕರು ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಗ್ರಾಹಕರ ಕಾನೂನು-2019ರ ಕುರಿತು ಉಪನ್ಯಾಸ ನೀಡಿದ ಜಿಲ್ಲಾ ಗ್ರಾಹಕರ ಸಂಘದ ಅಧ್ಯಕ್ಷ ಎನ್.ಆರ್. ಲಾತೂರ ಗಾಹಕರ ವ್ಯಾಜ್ಯ ಹೇಗೆ ಪರಿಹರಿಸಿಕೊಳ್ಳಬೇಕು? ಎಂದು ಮಾಹಿತಿ ನೀಡಿದರಲ್ಲದೇ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ಗ್ರಾಹಕರ ಕುಂದುಕೊರತೆಗಳ ಬಗ್ಗೆ ದೂರು ನೀಡಿವ ಮೂಲಕ ನ್ಯಾಯವಾದಿಗಳ ಸಹಾಯವಿಲ್ಲದೇ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.
ಎಲ್‌ಪಿಜಿ (ಸೇಲ್ಸ್) ಐಒಸಿ ಮುಖ್ಯ ವ್ಯವಸ್ಥಾಪಕ ಎಂ.ಎಸ್. ಜೋಶಿ ಎಲ್‌ಪಿಜಿ ಸುರಕ್ಷತೆ ಹಾಗೂ ಎಲ್‌ಪಿಜಿ ಗ್ಯಾಸ್ ಬಳಕೆ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ಉಪ ನಿಯಂತ್ರಕ ಎಸ್.ಆರ್. ಮಾಳಿ, ಸಹಾಯಕ ನಿಯಂತ್ರಕ ಎಸ್. ಎಸ್. ಉಪ್ಪಾರ ಸೇರಿದಂತೆ ಇತರರಿದ್ದರು. ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕರಾದ ಜೆ.ಸಿ. ಅಷ್ಟಗಿಮಠ ವಂದಿಸಿದರು.