ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ನಾಲ್ವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂಗೌಡ ಹಾಗೂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಎಂ.ಬಿ.ಮರಮಕಲ್ ಅವರಿಗೆ ಷರತ್ತು ಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ತಮ್ಮ ತಂದೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು 10 ಕೋಟಿ ರೂ. ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಗುರುಮಿಠಕಲ್ ಶಾಸಕ ನಾಗನಗೌಡ ಕಂದಕೂರು ಅವರ ಪುತ್ರ ಶರಣಗೌಡ ನೀಡಿದ್ದ ದೂರಿನ ಮೇರೆಗೆ ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಸಂಬಂಧ ನಗರದ ಸೆಷನ್ಸ್ ಕೋರ್ಟ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ವಿಚಾರಣೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸೇರಿ ನಾಲ್ವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸಂದೀಪ್ ಪಾಟೀಲ್, ಇಡೀ ಪ್ರಕರಣ ಭ್ರಷ್ಟಾಚಾರ ಕಾಯ್ದೆಗೆ ಅನ್ವಯವಾಗುವುದಿಲ್ಲ. ಹೀಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.
ಈ ವಾದವನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ಯಡಿಯೂರಪ್ಪ ಸೇರಿ ನಾಲ್ವರಿಗೂ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್ ಜತೆಗೆ ಸಾಕ್ಷ್ಯ ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳದಂತೆ ಷರತ್ತುಗಳನ್ನು ವಿಧಿಸಲಾಗಿದೆ. ಮುಂದಿನ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಲಾಗಿದೆ.