ಮೈಸೂರು: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಿ ಉತ್ತಮ ಪ್ರಜೆಯನ್ನಾಗಿಸುವ ಜತೆಗೆ ಬದುಕಿನ ಕಲೆಯನ್ನು ಕಲಿಸುವುದು ಸ್ಕೌಟ್ಸ್ ಅಂಡ್ ಗೈಡ್ಸ್‌ನ ಮುಖ್ಯ ಉದ್ದೇಶವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈಸೂರು ಜಿಲ್ಲಾ ಸಂಸ್ಥೆಯಿಂದ ನಗರದ ಜಯಚಾಮರಾಜೇಂದ್ರ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಕಚೇರಿಯಲ್ಲಿ ಮೈಸೂರು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಶನಿವಾರ ಆಯೋಜಿಸಿದ್ದ ಒಂದು ದಿನದ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದಲ್ಲಿ ದೊಡ್ಡ ಇತಿಹಾಸ ಹೊಂದಿದ್ದು, ಬದುಕಿನ ಕಲೆ ಕಲಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸರ್ಕಾರಿ, ಖಾಸಗಿ, ಧಾರ್ಮಿಕ ಸೇರಿದಂತೆ ಯಾವುದೇ ಕಾರ್ಯಕ್ರಮವಾದರೂ ಅಗತ್ಯ ಸೇವೆ ಒದಗಿಸಲಾಗುವುದು. ಜೊತೆಗೆ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ, ಪ್ರಜಾಪ್ರಭುತ್ವದ ಮೌಲ್ಯಗಳು, ರಾಷ್ಟ್ರಪ್ರೇಮ ಬೆಳೆಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರಮುಖ ಉದ್ದೇಶ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ 110 ವರ್ಷ ಇತಿಹಾಸ ಹೊಂದಿದ್ದು, ಮೈಸೂರು ಒಡೆಯರ್ ಅವರು ಇದರ ಸ್ಥಾಪನೆಗೆ ಒತ್ತು ನೀಡಿದರು. ರಾಜ್ಯ ಸರ್ಕಾರವು ಇದರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದು, ಇದೀಗ ಶಿಕ್ಷಣ ಇಲಾಖೆ ಪ್ರೋತ್ಸಾಹ ಸಹ ದೊರೆಯುತ್ತಿದೆ. ಶಾಲಾ, ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು,
ಇದರ ಅಂಗವಾಗಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಖ್ಯೆಯನ್ನು 10 ಲಕ್ಷಕ್ಕೆ ಏರಿಸುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಶಾಲಾ-ಕಾಲೇಜು ಸೇರಿದಂತೆ ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗೂ ಸ್ಕೌಟ್ಸ್ ಮತ್ತು ಗೈಡ್ಸ್ ಕೊಂಡೊಯ್ಯುವ ಕೆಲಸವಾಗಿದೆ. 2019ರ ಜನವರಿಯಲ್ಲಿ ಹಾಸನದಲ್ಲಿ ರಾಜ್ಯಮಟ್ಟದ ಜಾಂಬೂರಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಸಿದ್ಧತೆ ನಡೆಯುತ್ತಿದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಜಾನಕಿ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಗುರಿ, ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಬದುಕುವ ಕೌಶಲಗಳು, ನಾಯಕತ್ವ ಗುಣ, ಸಂವಹನ ಕೌಶಲ, ಸಾಮೂಹಿಕವಾಗಿ ಸೇವೆಯಲ್ಲಿ ತೊಡಗುವುದನ್ನು ಕಲಿಸುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಯಾರು ಬೇಕಾದರೂ ಸೇರಲು ಅವಕಾಶವಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ದಯಾನಂದ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಪಿ.ವಿಶ್ವನಾಥ್, ಗುರುಮೂರ್ತಿ, ಚೆಲುವಯ್ಯ ಇತರರಿದ್ದರು.