ಬೆಂಗಳೂರು: “ರಾಜ್ಯ ಸರ್ಕಾರ ಎಸಿಬಿಯನ್ನು ದುರುಪಯೋಗ ಮಾಡಿಕೊಂಡಿಲ್ಲ’ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಎಸಿಬಿಗೆ ಐಟಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡುವ ಅಧಿಕಾರ ಇದೆಯಾ. ಇಲ್ಲವಾ? ಎನ್ನುವ ಕುರಿತು ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಸೈನ್‌ಮೆಂಟ್ ಕೊಟ್ಟಿದ್ದಾರೆ. ಹೀಗಾಗಿ, ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ ಎಂದು ದೂರಿದರು. ಎಸಿಬಿ, ತನ್ನ ಕಾನೂನು ವ್ಯಾಪ್ತಿಯಲ್ಲಿಯೇ ಕೆಲಸ ಮಾಡುತ್ತಿದೆ. ನಾವು ಯಾವುದೇ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ. ಬಿಜೆಪಿಯವರೇ ಕೇಂದ್ರದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಆದಾಯ ತೆರಿಗೆ ಮತ್ತು ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರದಲ್ಲಿ ಸನಾತನ ಸಂಸ್ಥೆಯ ಕೆಲವರ ಕೈವಾಡ ಇರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಗೃಹ ಸಚಿವನಾಗಿ ಖಚಿತ ಮಾಹಿತಿ ಇಲ್ಲದೇ ಯಾವುದನ್ನೂ ಹೇಳಲು ಆಗುವುದಿಲ್ಲ. ಗೌರಿ ಲಂಕೇಶ್, ಕಲಬುರ್ಗಿ, ಪನ್ಸಾರೆ, ದಾಬೋಲ್ಕರ ಹತ್ಯೆ ಒಂದೇ ರೀತಿ ನಡೆದಿದೆ ಎನ್ನುವ ಆರೋಪ ಇದೆ.
ಆದರೆ, ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿರುವುದು ನಿಜ. ಅದನ್ನು ಬಹಿರಂಗ ಪಡಿಸಲು ಆಗುವುದಿಲ್ಲ. ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಬೇಕು. ಅದನ್ನು ಎಸ್‌ಐಟಿ ಕಲೆ ಹಾಕುವ ಕೆಲಸ ಮಾಡುತ್ತಿದೆ. ಆದಷ್ಟು ಬೇಗ ಗೌರಿ ಹಂತಕರನ್ನು ಪತ್ತೆ ಹಚ್ಚುತ್ತೇವೆ ಎಂದು ಹೇಳಿದರು.
ಇದಕ್ಕೂ ಮೊದಲು ತಾವು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಮಳೆಯ ಕುರಿತು ಮಾಹಿತಿ ನೀಡಿರುವುದಾಗಿ ರಾಮಲಿಂಗಾರೆಡ್ಡಿ ಹೇಳಿದರು.
ಐಟಿ ಅಧಿಕಾರಿಗಳ ವಿರುದ್ಧ ಎಸಿಬಿ ಅಧಿಕಾರಿಗಳು ದಾಳಿ ಮಾಡಿರುವ ಸುದ್ದಿ ಸತ್ಯಕ್ಕೆ ದೂರವಾದುದು, ಅದು ಸುಳ್ಳು ವದಂತಿಯಾಗಿದೆ.
-ಸಿದ್ಧರಾಮಯ್ಯ, ಮುಖ್ಯಮಂತ್ರಿ.