ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರ ರಚನೆ ವಿಷಯದಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಗುರುವಾರ ನಗರದಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್, ಸಿಪಿಐ ಮುಖಂಡರು ಹಾಗೂ ಕಾರ್ಯಕರ್ತರು, ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿ ಕೇಂದ್ರ ಬಿಜೆಪಿ ಸರ್ಕಾರದ ಸಂವಿಧಾನ ವಿರೋಧಿತನದ ಬಗ್ಗೆ ಘೋಷಣೆಗಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಡಿ.ಎಲ್. ವಿಜಯಕುಮಾರ್, ಪ್ರಜಾಪ್ರಭುತ್ವದಲ್ಲಿ ಸಂವಿಧಾನದಲ್ಲಿರುವ ಎಲ್ಲ ಆಶಯಗಳನ್ನು ಗಾಳಿಗೆ ತೂರಿ ಪ್ರಧಾನಿ ನರೇಂದ್ರ ಮೋದಿ ಹೇಗಾದರೂ ಮಾಡಿ ಸರ್ಕಾರ ರಚಿಸಿ ಎಂದು ಹೇಳುವ ಮೂಲಕ ಕುದುರೆ ವ್ಯಾಪಾರಕ್ಕೆ ಹಸಿರು ನಿಶಾನೆ ತೋರಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ.
ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ಕೊಡಬೇಕಿತ್ತು ಎಂದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ರೇಣುಕಾರಾಧ್ಯ ಮಾತನಾಡಿ, ಆರೆಸ್ಸೆಸ್ ಅಜೆಂಡಾ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ಸಿ. ಶಿವಾನಂದಸ್ವಾಮಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವರ್ತನೆಗಳನ್ನು ಖಂಡಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಶಾಂತೇಗೌಡ, ಅರಣ್ಯ ವಸತಿ ವಿಹಾರದಾಮಗಳ ಅಧ್ಯಕ್ಷ ಎ.ಎನ್. ಮಹೇಶ್, ಸಿಡಿಎ ಮಾಜಿ ಅಧ್ಯಕ್ಷ ಡಿ.ಎಸ್. ಚಂದ್ರೇಗೌಡ, ಕಾಂಗ್ರೆಸ್ ಮುಖಂಡರಾದ ನಿಸಾರ್, ಸಿಲ್ವಸ್ಟರ್, ಎನ್.ಡಿ. ಚಂದ್ರಪ್ಪ, ಎಚ್.ಪಿ. ಮಂಜೇಗೌಡ, ಕಾರ್ತಿಕ್ ಚೆಟ್ಟಿಯಾರ್, ಬಿ.ಎಂ. ಸಂದೇಶ್, ಕೆ.ವಿ.ಶಿವಕುಮಾರ್, ಪ್ರಕಾಶ್, ಬದ್ರು, ವಾಣಿ, ಮಲ್ಲೇಶ ಸ್ವಾಮಿ, ಹಿರೆಮಗಳೂರು ರಾಮಚಂದ್ರ, ಸಿಪಿಐನ ಗುಣಶೇಖರ್, ರಘು ಮುಂತಾದವರು ಪ್ರತಿಭಟನೆಯ ನೇತೃತ್ವವಹಿಸಿದ್ದರು.