ಯಾದಗಿರಿ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟಿಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರು ಎಂದೆಂದಿಗೂ ಸ್ಮರಣೀಯರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಚಟಾಣ ಏರಿಯಾದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್ ,ಜವಾಹರಲಾಲ್ ನೆಹರೂ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು ಎಂದು ಸ್ಮರಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವವು ಯುವ ಜನರಿಗೆ ದೇಶದ ಇತಿಹಾಸ ನೆನಪಿಸುವ ಕಾರ್ಯವಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.
ದೇಶ ಕಟ್ಟಲು ಹಿರಿಯರು ಮಾಡಿದ ಶ್ರಮ ಸಾರ್ಥಕವಾಗಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ದೇಶಾಭಿಮಾನ ಹೃದಯಂತರಾಳದಲ್ಲಿ ಮೂಡಬೇಕು ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳೊಂದಿಗೆ ಸೇರಿ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಸ್ವಚ್ಚತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ನಗರಸಭೆಯ ಪೌರಯುಕ್ತ ಬಿ.ಟಿ.ನಾಯಕ, ಯಾದಗಿರಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಅಧಿಕಾರಿಗಳು ಇದ್ದರು.