ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ಇನ್ನಿತರೆ ಸರ್ಕಾರಿ ಹಾಸ್ಟೆಲ್‌ಗಳಿಗೆ ಹೋಗಿ ಸಂಬಂಧಪಟ್ಟ ಕಾರ್ಯದರ್ಶಿಗಳು ಭೇಟಿ ನೀಡಲಿ ಅಲ್ಲಿನ ವಾಸ್ತವ ಗೊತ್ತಾಗುತ್ತೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ. ಸರ್ಕಾರದಿಂದ ಬಿಡುಗಡೆಯಾದ ಹಣ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಸರ್ಕಾರ ಎಸ್‌ಸಿಪಿಟಿಎಸ್‌ಪಿ ಕಾಯಿದೆ ಅಡಿ 2017-18ರ ಬಜೆಟ್‌ನಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಹಾಸ್ಟೆಲ್‌ಗಳ ನಿರ್ವಹಣೆ ಹಾಗೂ ಅಭಿವೃದ್ಧಿಗೆ 1369.39 ಕೋಟಿ ರೂ. ಮೀಸಲಿಟ್ಟಿದೆ. ಇದಲ್ಲದೆ ಸಾವಿರಾರು ಕೋಟಿ ನೀಡುತ್ತಿದೆ. ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ರಾಜ್ಯದಲ್ಲಿರುವ 2000ಕ್ಕೂ ಅಧಿಕ ಹಾಸ್ಟೆಲ್‌ಗಳಲ್ಲಿ ಸರಿಯಾದ ಮೂಲ ಸೌಲಭ್ಯಗಳನ್ನು ಕಲ್ಪಿಸಿಲ್ಲ.
ಪರಿಣಾಮ ವಿದ್ಯಾರ್ಥಿಗಳು ಸಿಗಬೇಕಾದ ನ್ಯಾಯಯುತ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ಜೊತೆಗೆ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಅನುದಾನ ನೀಡುತ್ತದೆ ಸರಿ. ಆದರೆ ವಿದ್ಯಾರ್ಥಿಗಳಿಗೆ ನೀಡಿದ ಹಣ ಸದ್ಬಳಕೆಯಾಗಬೇಕು. ಸಂಬಂಧಪಟ್ಟ ಇಲಾಖೆ ಕಾರ್ಯದರ್ಶಿಗಳು ಹಾಸ್ಟೆಲ್‌ಗಳಿಗೆ ಖುದ್ದು ಭೇಟಿ ನೀಡಿದರೇ, ಅಲ್ಲಿನ ವಾಸ್ತವ ಸ್ಥಿತಿ ಗೊತ್ತಾಗಲಿದೆ ಎಂದು ಅಭಿಪ್ರಾಯಪಟ್ಟಿತು.
ಈ ಸಂಬಂಧ ಪ್ರತಿವಾದಿಗಳಾದ ಸರ್ಕಾರದ ಮುಖ್ಯಕಾರ್ಯದರ್ಶಿ, ಸಮಾಜಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಲಾಖಾ ಆಯುಕ್ತರು, ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿತು.
ಎಸ್‌ಸಿಪಿಟಿಎಸ್‌ಪಿ ಯೋಜನೆಯಡಿಯಲ್ಲಿ ಬಿಡುಗಡೆಯಾದ ಹಣ ಸರಿಯಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಅನುದಾನದ ಖರ್ಚು ಹಾಗೂ ಹಾಸ್ಟೆಲ್‌ಗಳ ಬಗೆಗಿನ ವಾಸ್ತವ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸುವಂತೆ ನಿರ್ದೇಶಿಸುವಂತೆ ಕೋರಿ ಅರ್ಜಿದಾರರಾದ ಬೆಂಗಳೂರಿನ ವಿನಯ್ ವೇಣುಗೋಪಾಲ್ ಕೋರಿದ್ದಾರೆ.