ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಯ 362 ಅಭ್ಯರ್ಥಿಗಳ ಆಯ್ಕೆಯನ್ನು ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡಲು ಸರಕಾರ ಜಾರಿಗೆ ತಂದಿರುವ ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022 ಇದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ| ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರಹ್ಮತುಲ್ಲಾ ಕೊತ್ವಾಲ್ ವಾದ ಮಂಡಿಸಿ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಕಾನೂನುಬಾಹಿರ ಚಟುವಟಿಕೆ ನಡೆಸಿರುವುದು ಸಿಐಡಿ ವರದಿಯಿಂದ ಬಹಿರಂಗವಾಗಿದೆ. ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಅದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೂ ಕಾನೂನುಬಾಹಿರವಾಗಿ ಸರಕಾರ ಈ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದಿದೆ. ಹಾಗಾಗಿ, ಈ ಕಾಯ್ದೆ ಅಸಾಂವಿಧಾನಿಕ ಮತ್ತು ಅಕ್ರಮವಾಗಿದೆ ಎಂದರು.
ಕಾನೂನು ಬಾಹಿರವಲ್ಲ :
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 2011ನೇ ಸಾಲಿನ ನೇಮಕಾತಿಯಲ್ಲಿ ಕೆಪಿಎಸ್‌ಸಿಯ ಆಯ್ಕೆ ಪಟ್ಟಿಯನ್ನು ಹಿಂದೆ ಹೈಕೋರ್ಟ್ ರದ್ದುಪಡಿಸಿತ್ತು. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆ ಬಳಿಕ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡುವ ಸಂಬಂಧ ರಾಜ್ಯ ಸರಕಾರವು ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪೊ›ಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022 ಜಾರಿಗೆ ತಂದಿದೆ. ಹಿಂದಿನ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿತ್ತು. ಅನಂತರ ಕಾಯ್ದೆ ಜಾರಿಗೆ ಬಂದಿದೆ ಎನ್ನುವ ಕಾರಣಕ್ಕೆ ಇಡೀ ಕಾಯ್ದೆ ಕಾನೂನು ಬಾಹಿರವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.