Advertisement

ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್‌

07:47 PM Feb 24, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಸಲ್ಲಿಸಿರುವ ವರದಿ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆ ಅಥಣಿಯ “ವಿಮೋಚನಾ ಸಂಘ’ ಎಂಬ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್‌. ಪಾಟೀಲ್‌ ಎಂಬುವರು 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ವರದಿಗಳನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು ನ್ಯಾಯಪೀಠದ ಮುಂದೆ ಮಂಡಿಸಿದರು.

ವರದಿಯನ್ನು ಪರಿಶೀಲಿಸಿದ ನ್ಯಾಯಪೀಠ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಲು ಮತ್ತು ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿತು.

ಇದನ್ನೂ ಓದಿ:ಆಟೋವೇ ಅರಮನೆ : ಮೊಮ್ಮಕ್ಕಳ ಶಿಕ್ಷಣಕ್ಕಾಗಿ ಆಟೋ ಓಡಿಸಿ ಬದುಕು ಸಾಗಿಸುವ 74 ರ ವೃದ್ಧ

Advertisement

ಇದಕ್ಕೂ ಮೊದಲು, ರಾಜ್ಯದಲ್ಲಿನ ಅಪೌಷ್ಠಿಕ ಮಕ್ಕಳು, ಗರ್ಭೀಣಿಯರು, ಬಾಣಂತಿಯರು, ಹಾಲುಣಿಸುವ ತಾಯಿಂದಿರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ ಹಾಗೂ ಅವರ ಆರೋಗ್ಯ ತಪಾಸಣೆ ನಡೆಸುವ, ವೈದ್ಯಕೀಯ ನೆರವು ಕೊಡುವ ಕಾರ್ಯಕ್ರಮಗಳ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಎನ್‌. ವೇಣುಗೋಪಾಲಗೌಡ ಅವರ ನೇತೃತ್ವದ ಸಮಿತಿ ರಚಿಸಿ ರಾಜ್ಯ ಸರ್ಕಾರ 2021ರ ಫೆ.18ರಂದು ಹೊರಡಿಸಿರುವ ಆದೇಶದ ಪ್ರತಿಯನ್ನು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡು ನ್ಯಾಯಪೀಠ, ಸಮಿತಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಸಮಿತಿಯ ಕಾರ್ಯನಿರ್ವಹಣೆಗೆ ಅಗತ್ಯ ನೆರವು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next