ಬೆಂಗಳೂರು: ನಗರದ ವ್ಯಾಪ್ತಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಾಹನಗಳ ವಾಯು ಮಾಲಿನ್ಯ ತಪಾಸಣೆಯ (ಎಮಿಷೆನ್ ಟೆಸ್ಟ್) ನಕಲಿ ಪ್ರಮಾಣ ಪತ್ರ ನೀಡುತ್ತಿರುವ ಕೇಂದ್ರಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವಸ್ತುಸ್ಥತಿ ವರದಿ ಸಲ್ಲಿಸುವಂತೆ ಪೊಲೀಸರು ಹಾಗೂ ಸಾರಿಗೆ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ದೂರು ಸಲ್ಲಿಸಿದ ಹೊರತಾಗಿಯೂ ನಗರದಲ್ಲಿ ನಕಲಿ ಪ್ರಮಾಣ ಪತ್ರ ವಿತರಿಸುತ್ತಿರುವ ಸುಮಾರು 21 ಮಾಲಿನ್ಯ ಪರೀಕ್ಷಾ ಕೇಂದ್ರಗಳ ವಿರುದ್ಧ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನಗರದ ನಿವಾಸಿಗಳಾದ ಇ.ಎನ್.ರಾಘವೇಂದ್ರ ಮತ್ತು ಎಂ.ಬಿ.ನಾಗರಾಜ ಹೈಕೋರ್ಟ್‌ಗೆ ಸಾರ್ವ ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸಹಾಯಕ ಆಯುಕ್ತರು ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ (ಆರ್‌ಟಿಒ) ನ್ಯಾಯಪೀಠ ನಿರ್ದೇಶನ ನೀಡಿತು.
ಇದೊಂದು ಗಂಭೀರ ಪ್ರಕರಣವಾಗಿದ್ದು, ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ಕುರಿತು 2010ರಲ್ಲಿಯೇ ಅರ್ಜಿದಾರರು ದೂರು ಸಲ್ಲಿಸಿದ್ದಾರೆ. ಆದರೆ, ದೂರು ಆಧರಿಸಿ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಪೊಲೀಸರು ಹಾಗೂ ಸಾರಿಗೆ ಇಲಾಖೆ ಕಾರ್ಯವೈಖರಿ ಬಗ್ಗೆ ನ್ಯಾಯಪೀಠ ಅಸಮಧಾನ ವ್ಯಕ್ತಪಡಿಸಿತು.
ಅಲ್ಲದೆ, ಅರ್ಜಿದಾರರು ಆರೋಪಿಸಿದಂತೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಕಲಿ ಮಾಲಿನ್ಯ ಪರೀಕ್ಷಾ ಪ್ರಮಾಣಪತ್ರ ವಿತರಿಸುತ್ತಿರುವ ಕೇಂದ್ರಗಳ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿವರಣೆ ಒಳಗೊಂಡ ವಸ್ತುಸ್ಥಿತಿ ವರದಿಯನ್ನು ನಾಲ್ಕು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸಿಸಿಬಿ ಸಹಾಯಕ ಆಯುಕ್ತರು ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ನ್ಯಾಯಪೀಠ ಸೂಚಿಸಿತು.