ಹಾಸನ: ರಾಮಾಯಣ ಮಹಾ ಕಾವ್ಯವು ಕೇವಲ ಗ್ರಂಥವಲ್ಲ.ಅದು ಪ್ರತಿಯೊಬ್ಬರ ಜೀವನಕ್ಕೆ ಸ್ಪೂರ್ತಿದಾಯಕ ಮಾರ್ಗದರ್ಶಿಯಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅಭಿಪ್ರಾಯಪಟ್ಟರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಹಾಸನ ನಗರ ಸಭೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿಯವರು ಬರೆದ ರಾಮಾಯಾಣ ಮಹಾ ಕಾವ್ಯದಲ್ಲಿ ಪ್ರತಿಪಾದಿಸಿರುವ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತವಾಗಿರುತ್ತವೆ. ಮಹಾಪುರುಷರ ಹಾಗೂ ಮಹಾ ಕಾವ್ಯಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದು ಆಶಿಸಿದರು.
ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶ್ವೇತಾ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಹಿಂದುಳಿದ ಸಮುದಾಯದ ಜನರು ಆರ್ಥಿಕವಾಗಿ ಸದೃಢರಾಗಿ ಬೆಳೆಯಲು ಒಗ್ಗಟ್ಟು ಮುಖ್ಯ. ನಾಯಕ ಸಮುದಾಯ ಅಥವಾ ಹಿಂದುಳಿದ ಸಮುದಾಯದ ಪ್ರತಿಯೊಬ್ಬರೂ ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮೀಸಲಾತಿ ಸದ್ಬಳಕೆಯಾಗಲಿ: ಶೇ.7.5 ರಷ್ಟು ಮೀಸಲಾತಿಯನ್ನು ಪರಿಶಿಷ್ಟ ಪಂಗಡದವರು ಪಡೆದುಕೊಂಡು ಮುಂದಿನ ಪೀಳಿಗೆ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕರಿಸಬೇಕು ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ವಾಲ್ಮೀಕಿ ಭವನ ನಿರ್ಮಾಣ: ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಪ್ರೀತಂ.ಜೆ.ಗೌಡ ಅವರು, ಪ್ರತಿ ಸಮುದಾಯವು ಸಂಘಟಿತರಾಗಿ ಸವಲತ್ತುಗಳನ್ನು ಬಳಸಿಕೊಳ್ಳಬೇಕು. ಹಾಸನ ನಗರದಲ್ಲಿ ವಾಲ್ಮೀಕಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ನಿಮಾರ್ಣಕ್ಕೆ ನಿವೇಶನವನ್ನು ಡಿಸೆಂಬರ್ ಅಂತ್ಯದೊಳಗೆ ಒದಗಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಮಂಜೂರಾತಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸರ್ವರೂ ಸಮಾನರೆಂಬ ಆದರ್ಶ ಮೈಗೂಡಿಸಿಕೊಳ್ಳಿ. ಪ್ರತಿಯೊಬ್ಬರೂ ಯಾವುದೇ ಜಾತಿ ಬೇದಲ್ಲದೆ ಸರ್ವರೂ ಸಮಾನರೆಂಬ ಆದರ್ಶ ಮೈಗೂಡಿಸಿಕೊಳ್ಳಬೇಕು. ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನದ ತತ್ವಾದರ್ಶಗಳನ್ನು ಅನುಸರಿಸಬೇಕು ಎಂದರು. ಮುಖ್ಯ ಭಾಷಣಕಾರರಾಗಿದ್ದ ಸಹಾಯಕ ಪ್ರಾಧ್ಯಾಪಕ ನಂಜುಂಡಸ್ವಾಮಿ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸೆಪಟ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ ಪರಮೇಶ್, ತಾಲೂಕು ಪಂಚಾುತಿ ಅಧ್ಯಕ್ಷ ನಿಂಗೇಗೌಡ, ಪ್ರಭಾರ ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ನಾಯಕ ಸಮುದಾಯದ ಮುಖಂಡ ಮಹಾಂತಪ್ಪ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ನಾಯಕ ಸಮುದಾಯದ ಸಾಧಕರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಆಕರ್ಷಕ ಮೆರವಣಿಗೆ: ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಶಾಸಕ ಪ್ರೀತಂ.ಜೆ.ಗೌಡ, ಜಿಲ್ಲಾ ಪಂಚಾತತಿ ಅಧ್ಯಕ್ಷರಾದ ಬಿ.ಎಸ್. ಶ್ವೇತಾ, ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಡೋಲು ಕುಣಿತ, ವೀರಗಾಸೆ, ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೂಲಕ ನೋಡುಗರ ಗಮನ ಸೆಳೆದವು.