ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಕಾಂಗ್ರೆಸ್ ಜವಾಬ್ದಾರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಘಟಕದಿಂದ ಬುಧವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ.
ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕು.ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಶ್ರಮಿಸಬೇಕೆಂದು ಹೇಳಿದರು. ಬಿಜೆಪಿಯವರನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಅನಿವಾರ್ಯವಾಗಿದ್ದು, ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಮೈತ್ರಿ ಧರ್ಮವಾಗಿದೆ ಎಂದು ಹೇಳಿದರು. ಇದೇ ವೇಳೆ, ಉತ್ತರ ಕರ್ನಾಟಕದವರು ಪ್ರತ್ಯೇಕ ರಾಜ್ಯ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಅವರು, ಕಾಂಗ್ರೆಸ್ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು.