Advertisement

ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರ 3 ತಿಂಗಳೂ ಉಳಿಯಲ್ಲ

02:05 PM May 22, 2018 | |

ಮೈಸೂರು: ಜನಮತಕ್ಕೆ ವಿರುದ್ಧವಾಗಿ ಅಪವಿತ್ರ ಮೈತ್ರಿ ಮಾಡಿಕೊಂಡು ಸಂಖ್ಯಾಬಲದ ಆಧಾರದ ಮೇಲೆ ರಚಿಸಲು ಹೊರಟಿರುವ ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದರು.

Advertisement

ನಗರದ ರಾಜೇಂದ್ರ ಕಲಾಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಗೆ ಜನಮತವಿದ್ದರೂ ಅಗತ್ಯ ಸಂಖ್ಯಾಬಲದ ಕೊರತೆಯಿಂದಾಗಿ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫ‌ಲರಾಗಿ ರಾಜೀನಾಮೆ ನೀಡಬೇಕಾಯಿತು.

ಆದರೆ, ನಮ್ಮ ಬಳಿ ಅಗತ್ಯ ಸಂಖ್ಯಾಬಲ ಇದೆ ಎನ್ನುತ್ತಿರುವ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೋ ಇಲ್ಲವೋ ಎಂಬ ಅನುಮಾನ ಶುರುವಾಗಿದೆ. ಒಂದು ವೇಳೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ ಮಂತ್ರಿ ಮಂಡಲ ರಚನೆ ಸಂದರ್ಭದಲ್ಲೇ ಈ ಸರ್ಕಾರ ಬಿದ್ದು ಹೋದರೂ ಅಚ್ಚರಿ ಪಡಬೇಕಿಲ್ಲ. ಇಷ್ಟೆಲ್ಲಾ ಕಚ್ಚಾಟದ ನಡುವೆ ಸರ್ಕಾರ ರಚನೆಯಾದರೂ ಮೂರು ತಿಂಗಳು ಉಳಿಯುವುದು ಕಷ್ಟ ಎಂದರು.

ಗೆಲ್ಲುವ ವಿಶ್ವಾಸ: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮಾತನಾಡಿ, ಅಧಿಕಾರ ಹೋಯ್ತು ಎಂದು ಯೋಚಿಸಿ ಕೈಕಟ್ಟಿ ಕೂರದೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ನವರಿಗೆ ತಕ್ಕ ಉತ್ತರ ಕೊಡಬೇಕಾಗಿದೆ. ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದ ಯಡಿಯೂರಪ್ಪ ಅವರಿಗೆ ಶಕ್ತಿ ತುಂಬಲು ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವವರೆಗೆ ವಿರಮಿಸಬಾರದು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

Advertisement

ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್‌ಕುಮಾರ್‌ ಕಟೀಲ್‌, ವಿಧಾನ ಪರಿಷತ್‌ ಚುನಾವಣೆಯ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್‌, ಕ್ಯಾ.ಗಣೇಶ್‌ ಕಾರ್ಣಿಕ್‌, ಬಿ.ನಿರಂಜನಮೂರ್ತಿ, ಶಾಸಕರಾದ ಎಸ್‌.ಎ.ರಾಮದಾಸ್‌, ಅಪ್ಪಚ್ಚು ರಂಜನ್‌, ಎಲ್‌.ನಾಗೇಂದ್ರ, ಮಾಜಿ ಶಾಸಕ ಡಿ.ಎನ್‌.ಜೀವರಾಜ್‌, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ನಗರಾಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌ ಮುಂತಾದವರು ಹಾಜರಿದ್ದರು.

ಕಾಂಗ್ರೆಸ್‌ನಿಂದ ಷರತ್ತು: ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್‌ಗೆ ಬೇಷರತ್‌ ಬೆಂಬಲ ಕೊಡುವುದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು ಈಗ ಸರ್ಕಾರದಲ್ಲಿ ಪಾಲು ಕೇಳುತ್ತಿದ್ದಾರೆ. ತನಗೆ ಇಂತಿಷ್ಟೇ ಮಂತ್ರಿ ಸ್ಥಾನ ಬೇಕು. ಇಂತಹ ಖಾತೆಗಳೇ ಬೇಕು ಎಂದು ಪಟ್ಟಿ ಮಾಡಿಕೊಂಡು ಕುಳಿತಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದರು.

ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಅಧಿಕಾರಕ್ಕಾಗಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. 38 ಶಾಸಕರನ್ನು ಹೊಂದಿರುವ ಜೆಡಿಎಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವ ಕಾಂಗ್ರೆಸ್‌ ಯಾವ ನೈತಿಕತೆ ಉಳಿಸಿಕೊಂಡಿದೆ? ರಾಜ್ಯದ 20ಜಿಲ್ಲೆಗಳಲ್ಲಿ ಒಂದು ಸ್ಥಾನ ಗೆಲ್ಲದ, 130 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿರುವ ಜೆಡಿಎಸ್‌ ಅಪವಿತ್ರ ಮೈತ್ರಿಯ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಂಖ್ಯಾಬಲವೇ ಪ್ರಮುಖವಾಗಿರುವ ಕಾರಣ 104 ಸ್ಥಾನ ಗಳಿಸಿರುವ ಬಿಜೆಪಿ ಅಧಿಕಾರದಿಂದ ದೂರ ಉಳಿಯಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಮುಖ್ಯಮಂತ್ರಿ ಎನ್ನುವ ಮಾತನ್ನು ಸಾಬೀತುಪಡಿಸಿದ್ದಾರೆ. ಕರ್ನಾಟಕದಲ್ಲಿ ಇನ್ನು ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next