Advertisement

ಪ್ರತ್ಯೇಕ ಧರ್ಮಕ್ಕಾಗಿ ಕಾನೂನು ಹೋರಾಟ: ಜಾಮದಾರ್‌

10:34 PM Jun 22, 2019 | Lakshmi GovindaRaj |

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುತ್ತದೆ ಹಾಗೂ ಈ ಸಂಬಂಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಸಲಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಜಾಮದಾರ್‌ ಹೇಳಿದರು.

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಪ್ರಮಾಣ ಪತ್ರದಲ್ಲಿ ವೀರಶೈವ ಲಿಂಗಾಯತದ ಬದಲು ಲಿಂಗಾಯತ ಎಂದು ನಮೂದಿಸಲು ಆದೇಶಿಸುವಂತೆ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ. ಪ್ರಕರಣದಲ್ಲಿ ಸರ್ಕಾರ ಹಾಗೂ ವೀರಶೈವ ಲಿಂಗಾಯತ ಮಹಾಸಭಾವನ್ನು ಪ್ರತಿವಾದಿಯನ್ನಾಗಿ ಮಾಡಲಾಗುವುದು. ಈ ಮೂಲಕ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು ಎಂದು ತಿಳಿಸಿದರು.

ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಿಂಗಾಯತರಿಗೆ ನೀಡುತ್ತಿದ್ದ ಜಾತಿ ಪ್ರಮಾಣ ಪತ್ರದಲ್ಲಿ ವೀರಶೈವ ಲಿಂಗಾಯತ ಎಂದು ನಮೂದಿಸುವಂತೆ ಆದೇಶಿಸಿ, ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಲಾಗಿತ್ತು. 2013ರಲ್ಲಿ ಅದರ ವಿರುದ್ಧವಾಗಿ ಹೈಕೋರ್ಟ್‌ ತೀರ್ಪು ನೀಡಿದ್ದು, ತಪ್ಪು ಸರಿಪಡಿಸುವಂತೆ ತಿಳಿಸಿತ್ತು. ಆದರೆ, ಈವರೆಗೂ ಜಾತಿ ಪ್ರಮಾಣಪತ್ರದಲ್ಲಿ ವೀರಶೈವ ಲಿಂಗಾಯತ ಎಂದೇ ನಮೂದಿಸಲಾಗುತ್ತಿದೆ. ಇದನ್ನು ವಿರೋಧಿಸಿ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಹೋರಾಟವೇ ನಡೆದಿಲ್ಲ ಎಂದು ಜನರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕೆಲವರು ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಕೆಲವು ಶಾಸಕರು ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಹಾಗೆಯೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.

ಇದಕ್ಕೆ ನಮ್ಮ ವಿರೋಧ ಇಲ್ಲ. ವೀರಶೈವ ಧರ್ಮವಲ್ಲ. ಅದು ಲಿಂಗಾಯತ ಧರ್ಮದ ಒಂದು ಜಾತಿ. ಹೀಗಾಗಿ, ಒಬಿಸಿ ಪಟ್ಟಿಗೆ ಸೇರಿಸುವಾಗ ಲಿಂಗಾಯತ ಧರ್ಮದ ಉಪಜಾತಿಗಳು ಹಾಗೂ ನಿಗಮ ಸ್ಥಾಪಿಸುವಾಗ ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಪರಿಗಣಿಸಬೇಕು ಎಂದು ಸಲಹೆ ನೀಡಿದರು. ಗದಗದ ಡಂಬಳಮಠದ ಸಿದ್ದರಾಮ ಸ್ವಾಮೀಜಿ, ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next