ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ರದ್ದು ಪಡಿಸಿ, ಲೋಕಾಯುಕ್ತವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಶನಿವಾರ ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಸರ್ಕಾರದ ಅಧೀನದಲ್ಲಿರುವ ಎಸಿಬಿಯಿಂದ ಭ್ರಷ್ಟಾಚಾರ ಮುಕ್ತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ಎಸಿಬಿಯನ್ನು ಕೂಡಲೇ ರದ್ದುಗೊಳಿಸಬೇಕು. ಮತ್ತೆ ಲೋಕಾಯುಕ್ತವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಎಸಿಬಿ ಇರುವವರೆಗೂ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ. ಈಗಾಗಲೇ ಎಸಿಬಿ ರದ್ದುಪಡಿಸುವಂತೆ ಒತ್ತಾಯಿಸಿ ಹಲವು ಸಂಘಟನೆಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವ್ಯವಸ್ಥೆ ಬಗ್ಗೆ ಅಫಿಡವಿಟ್ ಕೂಡ ಸಲ್ಲಿಸಿವೆ. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವೇದಿಕೆ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಮಾತನಾಡಿ, ಚುನಾವಣೆಗೂ ಮೊದಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಸಿಬಿ ರಚನೆ ವಿರೋಧಿಸಿದ್ದರು. ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಕೂಡ ನಡೆಸಿದ್ದರು. ಆದರೆ ಇದೀಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಲೋಕಾಯುಕ್ತ ಬಲಪಡಿಸುವ ಕುರಿತು ಯಾವುದೇ ಮಾತನಾಡುತ್ತಿಲ್ಲ. ಖಾಲಿ ಇರುವ ಉಪಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಎಸಿಬಿ ರಚನೆ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿ, ಎಸಿಬಿ ರದ್ದು ಪಡಿಸಲು ಒತ್ತಾಯಿಸಿದ್ದರು. ಇದೀಗ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿದೆ. ಆದರೂ ಸದನದಲ್ಲಾಗಲಿ, ಹೊರಗಡೆಯಾಗಲಿ ಈ ಬಗ್ಗೆ ಬಿಎಸ್‌ವೈ ಮಾತನಾಡುತ್ತಿಲ್ಲ. ಇದು ದುರಂತವೇ ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.