ನಂಜನಗೂಡು/ಗುಂಡ್ಲುಪೇಟೆ: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭೆಯ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಪರ ಪ್ರಚಾರ ಬಿರುಸುಗೊಂಡಿದೆ. ನಂಜನಗೂಡು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬುಧವಾರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆ ನಡೆಸಿದರು. ಈ ಸಭೆಗಳಲ್ಲಿ ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಪಾಲ್ಗೊಂಡಿದ್ದು ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದೆ. ಈ ಮಧ್ಯೆ, ಯಡಿಯೂರಪ್ಪ ಎರಡೂ ಕಡೆ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದರು.
ಇದೇ ವೇಳೆ, ನಂಜನಗೂಡಿನ ದೇವರಧಿಸನಹಳ್ಳಿ ನಗರದ ವಕ್ಕಲಗೇರಿ ಸೇರಿದಂತೆ ಅನೇಕ ಬಡಾವಣೆಗಳಲ್ಲಿ
ಚಿತ್ರನಟ ಜಗ್ಗೇಶ್ ಅವರು ಪತ್ನಿ ಪರಿಮಳ ಜೊತೆ ಸೇರಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಪರ ಮತಯಾಚಿಸಿದರು. ಲಂಡನ್‌ನ ಬರೂಗಾ ಪ್ರಾಂತ್ಯದ ಮಾಜಿ ಮೇಯರ್ ನೀರಜ್ ಪಟೇಲ್ ಆಗಮಿಸಿ, ಬಿಜೆಪಿ ಪರ ಪ್ರಚಾರ ನಡೆಸಿದರು.
ಎಸ್ಸೆ„ ವರ್ಗ:ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದ್ದ ಹಿನ್ನೆಲೆ ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್Õಪೆಕ್ಟರ್ ಬಿ.ಎನ್.ಸಂದೀಪ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ
ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಅಕ್ರಮ ಮದ್ಯ ವಶ: ನಂಜನಗೂಡು ತಾಲೂಕಿನ ವಿವಿಧೆಡೆ ದಾಳಿ ನಡೆಸಿರುವ ಅಬಕಾರಿ ಸಿಬ್ಬಂದಿ 48.360 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡು, ನಾಲ್ವರನ್ನು ದಸ್ತಗಿರಿ ಮಾಡಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ವ್ಯಾಪ್ತಿಗೆ ಬರುವ ವಿವಿಧೆಡೆ ದಾಳಿ ನಡೆಸಿರುವ ಅಧಿಕಾರಿಗಳು 2.850 ಲೀ. ಮದ್ಯ ವಶಪಡಿಸಿಕೊಂಡಿದ್ದಾರೆ.