Advertisement
ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಶಾಸಕರೇ ಹೆಚ್ಚಿದ್ದಾರೆ. ಆದರೆ, 2004 ರಿಂದ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಮುಖ ಕಂಡಿಲ್ಲ. ಕ್ಷೇತ್ರ ಪುನರ್ ವಿಂಗಡನೆಗೂ ಮುಂಚೆ 2004 ರಲ್ಲಿ ಸಿ.ಕೆ.ಜಾಫರ್ ಷರೀಫ್ ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಕ್ಷೇತ್ರ ವಿಂಗಡನೆಯ ನಂತರ ಮೂರು ಕ್ಷೇತ್ರಗಳಾದ ನಂತರವೂ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ.
Related Articles
Advertisement
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ್ದರಿಂದ ರೋಷನ್ ಬೇಗ್ ಮುನಿಸಿಕೊಂಡಿದ್ದರು. ಆದರೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ರೋಷನ್ ಬೇಗ್ ಅವರಿಗೆ ಮಂತ್ರಿ ಸ್ಥಾನದ ಆಮಿಷ ತೋರಿಸಿಯೇ ರಿಜ್ವಾನ್ ಅರ್ಷದ್ ಪರ ಸಕ್ರೀಯವಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಅದೇ ಕಾರಣಕ್ಕೆ ಮುನಿಸು ಬದಿಗಿಟ್ಟು ರೋಷನ್ ಬೇಗ್ ಈ ಬಾರಿ ರಿಜ್ವಾನ್ ಅರ್ಷದ್‌ಗೆ ತಮ್ಮ ಕ್ಷೇತ್ರದಲ್ಲಿ ಎಲ್ಲರಿಗಿಂತಲೂ ಹೆಚ್ಚು ಮತ ಕೊಡಿಸುವ ಮಾತನಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನ ಐವರು ಶಾಸಕರಿದ್ದು, ಪ್ರಮುಖವಾಗಿ ಎಸ್.ಟಿ.ಸೋಮಶೇಖರ್ ಹಾಗೂ ಬೈರತಿ ಬಸವರಾಜ್ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಟ್ಟಾಗ ಕೃಷ್ಣ ಬೈರೇಗೌಡ ಅವರು ಅಭ್ಯರ್ಥಿಯಾಗಬೇಕೆಂದು ಶಾಸಕರೆಲ್ಲರೂ ಒಗ್ಗಟ್ಟಿನಿಂದ ಅವರ ಬೆಂಬಲಕ್ಕೆ ನಿಂತಿದ್ದರು. ಶಾಸಕರ ಒಗ್ಗಟ್ಟಿನ ಲೆಕ್ಕಾಚಾರದ ಹಿಂದೆ ಮಂತ್ರಿಗಿರಿಯ ಮೇಲಿನ ಆಸೆಯೇ ಕಾರಣ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಕೃಷ್ಣ ಬೈರೇಗೌಡರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮುಂಚೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶಾಸಕರೊಂದಿಗಿನ ಸಭೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬಂದರೆ ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಶಾಸಕರು ಮಾತ್ರ ಈ ಬಗ್ಗೆ ಬಹಿರಂಗವಾಗಿ ತಮ್ಮ ಬಯಕೆಯನ್ನು ಹೇಳಿಕೊಳ್ಳದೇ ಇದ್ದರೂ, ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟುಕೊಂಡೇ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.