ಬೆಂಗಳೂರು: ಮಳೆಯಿಂದ ಆಗುವ ಅನಾಹುತಗಳನ್ನು ತಪ್ಪಿಸಲು 198 ವಾರ್ಡ್‌ಗಳ ಸಹಾಯಕ ಹಾಗೂ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್‌ಗಳು ನಿತ್ಯ ಬೆಳಗ್ಗೆ 7.30 ರಿಂದ 10.30ರವರೆಗೆ ಕಡ್ಡಾಯವಾಗಿ ವಾರ್ಡ್‌ನಲ್ಲಿರಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.
ಮಳೆಯಿಂದಾಗಿ ನಗರದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಶನಿವಾರ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದ ಅವರು, ವಾರ್ಡ್ ವ್ಯಾಪ್ತಿಯಲ್ಲಿನ ಚರಂಡಿ ರಿಪೇರಿ, ಹೂಳೆತ್ತುವುದು, ಮುಖ್ಯರಸ್ತೆಗಳಲ್ಲಿನ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವುದು ಸೇರಿದಂತೆ ಇನ್ನಿತರ ಮುಂಜಾಗ್ರತ ಕ್ರಮಗಳನ್ನು ಆಯಾ ವಾಡ್‌ನ ಅಧಿಕಾರಿಗಳು ಖುದ್ದಾಗಿ ನಿರ್ವಹಿಸಬೇಕು. ಅದನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 16 ಸಾವಿರ ರಸ್ತೆಗುಂಡಿಗಳನ್ನು ಮಚ್ಚುವುದು ಬಾಕಿಯಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೂಡಲೇ ವೆಟ್‌ಮಿಕ್ಸ್ ಹಾಕಿ ತಾತ್ಕಾಲಿಕವಾಗಿ ಮುಚ್ಚಬೇಕು. ಮಳೆ ನಿಂತ ಕೂಡಲೇ ಸಮರೋಪಾದಿಯಲ್ಲಿ ನಗರದಲ್ಲಿನ ಎಲ್ಲ ರಸ್ತೆ ಗುಂಡಿಗಳನ್ನು ಮಚ್ಚಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದರೊಂದಿಗೆ ನಗರೋತ್ಥಾನ ಯೋಜನೆಯಡಿಯಲ್ಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಕುರಿತು ಮಾಹಿತಿ ಪಡೆದ ಅವರು ಜನವರಿ ವೇಳೆಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಗಡುವು ನೀಡಿದ್ದಾರೆ.
ಜತೆಗೆ ಹೆಚ್ಚು ವಾಹನಗಳು ಸಂಚರಿಸುವ ಮುಖ್ಯ ರಸ್ತೆಗಳಲ್ಲಿ ಉದ್ಭವಿಸುವ ಗುಂಡಿಗಳನ್ನು ಮುಚ್ಚಲು ಆದ್ಯತೆಯ ಮೇಲೆ ಕೆಲಸ ಮಾಡುವಂತೆ ಸೂಚನೆ ನೀಡಿರುವ ಅವರು, ಮೈಸೂರು ರಸ್ತೆ, ವಿಮಾನ ನಿಲ್ದಾಣ ರಸ್ತೆ, ಹಳೆ ಮದ್ರಾಸ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ರಸ್ತೆ ಸೇರಿ ಇನ್ನಿತರ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಕೂಡಲೇ ಮುಚ್ಚುವಂತೆ ತಿಳಿಸಿದ್ದಾರೆ.
ಸಭೆಯಲ್ಲಿ ಮೇಯರ್ ಸಂಪತ್‌ರಾಜ್, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಆಡಳಿತ ಪಕ್ಷ ನಾಯಕ ರಿಜ್ವಾನ್ ಮಹಮದ್ ನವಾಬ್ ಸೇರಿದಂತೆ ಪ್ರಮುಖರು ಹಾಜರಿದ್ದರು.