ಗದಗ: ಯುಪಿಎ ಸರಕಾರ ಅನುಷ್ಠಾನಕ್ಕೆ ತಂದಿದ್ದ ಭೂಸ್ವಾಧೀನ ಕಾಯ್ದೆಗೆ ರಾಜ್ಯ ಸಮ್ಮಿಶ್ರ ಸರಕಾರ ತಿದ್ದುಪಡಿ ತರಲು ಮುಂದಾಗಿದೆ. ರೈತ ವಿರೋಧಿ ನಿರ್ಧಾರವನ್ನು ಖಂಡಿಸಿ ಜೂ. 10ರಂದು ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಂದ್ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಟಿಪ್ಪು ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ, ಹೆದ್ದಾರಿ ಬಂದ್ ನಡೆಸಲಾಗುತ್ತದೆ ಎಂದು ತಿಳಿಸಿದರು. ಎಸ್‌ಇಝಡ್ ಕೈಗಾರಿಕೆಗಳು ಮತ್ತು ನಗರೀಕರಣದ ಹೆಸರಲ್ಲಿ ದೇಶಾದ್ಯಂತ ರೈತರ ಜಮೀನುಗಳನ್ನು ಬೇಕಾಬಿಟ್ಟಿ ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಯುಪಿಎ ಸರಕಾರ ಏ. 1, 2014ರಂದು ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಅಲ್ಲದೇ, ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರತಿಯಾಗಿ ರೈತರಿಗೆ ಗ್ರಾಮೀಣ ಭಾಗದಲ್ಲಿ ನಾಲ್ಕು ಪಟ್ಟು, ನಗರ ಪ್ರದೇಶದಲ್ಲಿ ಎರಡು ಪಟ್ಟು ಪರಿಹಾರ ನೀಡಬೇಕೆಂಬ ಷರತ್ತು ವಿಧಿಸಿದೆ. ಆದರೆ, ರಾಜ್ಯ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಜಿಲ್ಲಾಧಿಕಾರಿಗಳಿಗೆ ಇದರ ಸಂಪೂರ್ಣ ಅಧಿಕಾರವನ್ನು ವಹಿಸಿ, ಹಿಡಗಂಟು ಕೊಟ್ಟು ರೈತರ ಭೂಮಿಯನ್ನು ಖರೀದಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದರಿಂದ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ರೈತರು ಬೀದಿಗೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರಕಾರದ ಕುತಂತ್ರವನ್ನು ಖಂಡಿಸಿ ಜೂ. 10ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟದಲ್ಲಿ ಜಿಲ್ಲೆಯ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸಂಘದ ಪ್ರಮುಖರಾದ ವಿಜಯಕುಮಾರ ಪಿ. ಸುಂಕದ, ವಿಠuಲ್ ಜಾದವ್, ರವಿ ಒಡಿಯರ್ ಇದ್ದರು.