ಹುಬ್ಬಳ್ಳಿ: ಅವಳಿ ನಗರದಲ್ಲಿ ನಡೆಯಲಿರುವ ರಾಜ್ಯ ಒಲಿಂಪಿಕ್ಸ್‌ಗಾಗಿ ಸಿದ್ಧತೆ ನಡೆದಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರೀಡಾಕೂಟದ ಯಶಸ್ಸಿಗೆ ಪ್ರಯತ್ನಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.
ನಗರದ ನೆಹರು ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಶೇ.80ರಷ್ಟು ಸಿದ್ಧತೆ ಪೂರ್ಣಗೊಂಡಿದೆ ಎಂದರು.
ಹುಬ್ಬಳ್ಳಿಯಲ್ಲಿ ಕಬಡ್ಡಿ, ವಾಲಿಬಾಲ್ ನೆಹರು ಮೈದಾನದಲ್ಲಿ ನಡೆದರೆ, ಈಜು ಸ್ಪರ್ಧೆಗಳು ಈಜುಗೊಳದಲ್ಲಿ ನಡೆಯಲಿವೆ. ಗೋಕುಲ ರಸ್ತೆಯಲ್ಲಿ ಸೈಕ್ಲಿಂಗ್ ಸ್ಪರ್ಧೆಜರುಗಲಿದೆ. ಜ.27ರಂದು ಕ್ರೀಡಾ ಸಚಿವ ಪ್ರಮೋದ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಎಲ್ಲ ಸಮಿತಿಗಳ ಸಭೆ ಧಾರವಾಡದಲ್ಲಿ ನಡೆಯಲಿದೆ ಎಂದು ತಿಳಿಸಿದರು.
4500 ಕ್ರೀಡಾಪಟುಗಳು, 500 ತಾಂತ್ರಿಕ ಸಿಬ್ಬಂದಿ ಹಾಗೂ 500 ಇತರೆ ಸಿಬ್ಬಂದಿ ಸೇರಿದಂತೆ ಸುಮಾರು 5500 ಜನರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಪಟುಗಳಿಗೆ ಕ್ರೀಡೆಯನ್ನಾಧರಿಸಿ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು.
ಅಲ್ಲದೇ ಕೆಲವು ಕಲ್ಯಾಣ ಮಂಟಪದವರು ಉಚಿತವಾಗಿ ಕಲ್ಯಾಣ ಮಂಟಪ ನೀಡುವುದಾಗಿ ತಿಳಿಸಿದ್ದಾರೆ. ಹೊಟೇಲ್ ಸಂಘದವರು ಅವಳಿ ನಗರದ ಕೆಲ ಹೊಟೇಲ್‌ಗಳಲ್ಲಿ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೆಲ ರೂಮ್ ಗಳನ್ನು ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಕ್ರೀಡಾಪಟುಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಧಾರವಾಡ ಜಿಲ್ಲೆಯ ಕ್ರೀಡಾಪಟುಗಳಿಗೆ ಅನ್ಯಾಯವಾಗಿದೆಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಸಂಸ್ಥೆಯವರೊಂದಿಗೆ ಚರ್ಚಿಸಲಾಗಿದ್ದು, ಅರ್ಹ ಕ್ರೀಡಾಪಟುಗಳಿಗೆ ಅವಕಾಶ ಸಿಗಲಿದೆ ಎಂದರು.
ಜಿಲ್ಲಾ ಒಲಿಂಪಿಕ್ಸ್ ಸಂಸ್ಥೆಯವರನ್ನು ಕಡೆಗಣಿಸಲಾಗಿದೆ ಎಂಬ ಬಗ್ಗೆ ಆರೋಪ ಕೇಳಿಬಂದಿದ್ದು, ಈ ಕುರಿತು ರಾಜ್ಯ ಒಲಿಂಪಿಕ್ಸ್ ಸಂಸ್ಥೆಯೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ತಹಶೀಲ್ದಾರ ಶಶಿಧರ ಮಾಡ್ಯಾಳ ಇದ್ದರು.