ಔರಾದ: ಶಾಲೆ-ಕಾಲೇಜುಗಳು ಸಾಮಾಜಿಕ ಸಮಸ್ಯೆಗಳ ಕುರಿತು ಚರ್ಚಿಸದೆ ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಿವೆ. ಆದ್ದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಾಜಶೇಖರ ಮಂಗಲಗಿ ಹೇಳಿದರು.
ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಪಠ್ಯ ಬೋಧನೆಗೆ ಮಾತ್ರ ಸೀಮಿತಗೊಳಿಸುತ್ತಿವೆ. ಪಠ್ಯ ಬೋಧನೆಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ದೇಶದ ಪರಪಂಪರೆ, ಇತಿಹಾಸ ಕುರಿತು ಪರಿಚಯಿಸಿ, ಅವುಗಳನ್ನು ಶ್ರೀಮಂತಗೊಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
ರಮೇಶಕುಮಾರ ಪಾಟೀಲ ಮಾತನಾಡಿ, ಮಾತನಾಡಲು ಬಾರದೆ ಇದ್ದರೂ ಕೂಡ ಪಕ್ಷಿಗಳು ತಮ್ಮ ಜೀವನದಲ್ಲಿ ಗುರಿ ಇಟ್ಟುಕೊಂಡು ತಮ್ಮ ಗುರಿ ತಲುಪುತ್ತವೆ. ವಿಶ್ವದಲ್ಲಿಯೇ ಅತಿ ಬುದ್ಧಿವಂತರಾದ ನಾವು ನಮ್ಮ ಜೀವನದಲ್ಲಿ ಒಂದು ಗುರಿ ಇಟ್ಟುಕೊಂಡು ಅದನ್ನು ತಲುಪುವ ತನಕ ನಿರಂತರ ಹೋರಾಟ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ನಾಗನಾಥ ಬಿರಾದಾರ ಮಾತನಾಡಿ, ಪ್ರತಿಯೊಂದು ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಆಳ ಅಧ್ಯಯನ ಮಾಡಿ ತಮ್ಮ ವಿದ್ಯಾರ್ಥಿ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಮಾತನಾಡಿ, ವಿದ್ಯಾರ್ಥಿಗಳಿಗೆ ವಿನೂತ ರೀತಿಯಲ್ಲಿ ಕಲಿಕಾ ಕಾರ್ಯಾಗಾರಗಳನ್ನು ಆಯೋಜನೆ ಮಾಡಿ ಪರಿಕ್ಷೆ ಫಲಿತಾಂಶದಲ್ಲಿ ಸುಧಾರಣೆ ಮಾಡಲು ನಾಲ್ಕು ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದರು. ಕಲ್ಲಪ್ಪ ಬುಟ್ಟೆ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹಾಜರಿದ್ದರು.