ಬೆಳಗಾವಿ: “ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ’ ಎಂದು ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಲಖನ ಜಾರಕಿಹೊಳಿ ಸ್ಪರ್ಧಿಸುವ ಬಗ್ಗೆ ಏನೂ ತೀರ್ಮಾನವಾಗಿಲ್ಲ. ಹೈಕಮಾಂಡ್ ಹಾಗೂ ರಾಜ್ಯ ವರಿಷ್ಠರು ಸೂಚಿಸುವವರು ಲೋಕಸಭೆಗೆ ಸ್ಪರ್ಧಿಸುತ್ತಾರೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಸರಕಾರ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಜಿಲ್ಲೆಯಲ್ಲಿ ಸದ್ಯ ಉತ್ತಮ ಮಳೆಯಾಗುತ್ತಿದ್ದು, ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಈ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಚಿಂತಿಸಲಾಗುತ್ತಿದೆ. ಸಂಪುಟ ವಿಸ್ತರಣೆ ವಿಷಯ ವರಿಷ್ಠರಿಗೆ ಬಿಟ್ಟಿದ್ದು ಎಂದು ತಿಳಿಸಿದರು.
ಸದ್ಯ ನಾನು ಪೂರ್ಣ ಪ್ರಮಾಣದ ಸಚಿವನಾಗಿದ್ದು, ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಿದ್ದೇನೆ. ಸಿದ್ದರಾಮಯ್ಯ ಹಾಗೂ ಪರಮೇಶ್ವರ ನಮ್ಮ ನಾಯಕರು. ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿಗಳು. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಣ್ಣೀರು ಕುರಿತು ಪ್ರತಿಕ್ರಿಯಿಸಿದ ಸಚಿವ ರಮೇಶ ಜಾರಕಿಹೊಳಿ, ಮುಖ್ಯಮಂತ್ರಿಗಳು ಭಾವನಾತ್ಮಕವಾಗಿ ಮಾತನಾಡುವಾಗ ಕಣ್ಣೀರು ಹಾಕಿದ್ದಾರೆ. ಧಾರ್ಮಿಕವಾಗಿ ಹಾಗೂ ಭಾವನಾತ್ಮಕವಾಗಿ ಯೋಚಿಸುವವರು ಕಣ್ಣೀರು ಸುರಿಸುತ್ತಾರೆ. ಇದನ್ನೇ ದೊಡ್ಡದ್ದನ್ನಾಗಿ ಮಾಡಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದರು.