Advertisement
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಫೆ.16ರಂದು ನೀಡಿದ ತೀರ್ಪಿನ ಬಗ್ಗೆ ಚರ್ಚಿಸಲು ಗುರುವಾರ ವಿಧಾನಸೌಧದಲ್ಲಿ ಕರೆಯಲಾಗಿದ್ದ ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ಮುಖಂಡರು, ಕಾವೇರಿ ಜಲಾನಯನ ಪ್ರದೇಶದ ಶಾಸಕರು ಮತ್ತು ಸಂಸದರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, “ಈ ವಿಚಾರದಲ್ಲಿ ಕಾನೂನು ತಂಡ ಹೇಳಿದಂತೆ ಸರ್ಕಾರ ನಡೆದುಕೊಳ್ಳಲಿದೆ. ಸರ್ಕಾರದ ಮುಂದಿನ ನಡೆ ಕಾನೂನು ತಂಡದ ಅಭಿಪ್ರಾಯದ ಮೇಲೆ ಅವಲಂಬಿತವಾಗಿದೆ ಎಂದು ಸ್ಪಷ್ಟಪಡಿಸಿದರು.
Related Articles
Advertisement
ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ವೈ.ಎಸ್.ವಿ. ದತ್ತಾ, ವಿಧಾನಪರಿಷತ್ತಿನ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಉಪನಾಯಕ ಕೆ.ಟಿ. ಶ್ರೀಕಂಠೇಗೌಡ, ಸಂಸದ ಪಿ.ಸಿ. ಮೋಹನ್, ಸಚಿವರಾದ ಎಂ.ಬಿ. ಪಾಟೀಲ್, ಟಿ.ಬಿ. ಜಯಚಂದ್ರ, ಎಂ.ಆರ್. ಸೀತಾರಾಂ, ಎ. ಮಂಜು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಅಡ್ವೋಕೇಟ್ ಜನರಲ್ ಮಧುಸೂಧನ್ ಆರ್. ನಾಯಕ್ ಮತ್ತಿತರರು ಇದ್ದರು.
“ಕಾವೇರಿ ನಿರ್ವಹಣಾ ಮಂಡಳಿ’ ರಚನೆಗೆ ಬಿಜೆಪಿಯ ವಿರೋಧವಿದೆ. ಒಂದು ವೇಳೆ ನಿರ್ವಹಣಾ ಮಂಡಳಿ “ಶಾಶ್ವತ’ ಮಂಡಳಿಯಾದರೆ ರಾಜ್ಯಕ್ಕೆ ಅನ್ಯಾಯ ಮತ್ತು ಅನಾಹುತ ಆಗಲಿದೆ. 14.75 ಟಿಎಂಸಿ ಹೆಚ್ಚುವರಿ ನೀರು ಸಿಕ್ಕಿದ್ದು ಬಿಟ್ಟರೆ, ಪೂರ್ಣ ಪ್ರಮಾಣದ ಬೇಡಿಕೆ ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ನಿರ್ವಹಣಾ ಮಂಡಳಿ ರಚನೆ, ಮರು ಪರಿಶೀಲನಾ ಅರ್ಜಿ ಸಲ್ಲಿಕೆಯ ಸಾಧ್ಯತೆ ಮತ್ತಿತರರ ವಿಚಾರಗಳ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆದುಕೊಂಡು ಮುಂದಿನ ನಿರ್ಧಾರಕ್ಕೆ ಬರುವಂತೆ ಸರ್ಕಾರಕ್ಕೆ ಸಲಹೆ ಕೊಡಲಾಗಿದೆ’.– ಜಗದೀಶ್ ಶೆಟ್ಟರ್, ವಿರೋಧ ಪಕ್ಷದ ನಾಯಕ. “ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನಿಂದ ರಾಜ್ಯಕ್ಕೆ ಸಂಪೂರ್ಣ ನ್ಯಾಯ ಸಿಕ್ಕಿದೆ ಎಂದು ಭಾವಿಸಿದರೆ ಮೂರ್ಖತನವಾಗುತ್ತದೆ. ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯದ ಮೇರೆಗೆ ಶುಕ್ರವಾರ ಕೇಂದ್ರ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದಿದೆ. ಈ ಅವಕಾಶವನ್ನು ರಾಜ್ಯ ಸರ್ಕಾರ ಸದ್ಬಳಕೆ ಮಾಡಿಕೊಳ್ಳಬೇಕು. ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ತೀರ್ಪು ಪ್ರಶ್ನಿಸಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸುವ ನಿಟ್ಟಿನಲ್ಲಿ ಯೋಚಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ’.
– ವೈ.ಎಸ್.ವಿ. ದತ್ತಾ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ.