Advertisement
ಪಾಲಿಕೆ ಚುನಾವಣೆಗೆ ಚುನಾವಣಾ ಆಯೋಗ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ನಾಮಪತ್ರ ಸಲ್ಲಿಕೆಗೆ ಆ.21 ಕಡೆಯ ದಿನ. ಈ ನಡುವೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಸ್ಪರ್ಧಾಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
Related Articles
Advertisement
ಬೆಂಬಲಿಗರು ಕಣಕ್ಕೆ: ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಇನ್ನೂ ಬಂಡಾಯದ ಬಿಸಿ ತಪ್ಪಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿಮುಟ್ಟಿಸಿದ್ದ ಕೆ.ಹರೀಶ್‌ಗೌಡ ಜೆಡಿಎಸ್ ಅಧಿಕೃತ ಅಭ್ಯರ್ಥಿ ಪ್ರೊ.ಕೆ.ಎಸ್. ರಂಗಪ್ಪ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿ ರಂಗಪ್ಪ ಸೋಲಿಗೆ ಕಾರಣರಾಗಿದ್ದರು.
ಇದೀಗ ಇದೇ ಬಂಡಾಯವನ್ನು ಪಾಲಿಕೆ ಚುನಾವಣೆಯಲ್ಲಿಯೂ ಮುಂದುವರಿಸಿರುವ ಹರೀಶ್‌ಗೌಡ, ಪಾಲಿಕೆ ಚುನಾವಣೆಗೆ ತಮ್ಮ ಬೆಂಬಲಿಗರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹರೀಶ್‌ಗೌಡರ ಈ ನಿರ್ಧಾರ ಜೆಡಿಎಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಬಂಡಾಯದ ಬಿಸಿ: ಪಾಲಿಕೆಯ 65 ವಾರ್ಡ್‌ಗಳಿಂದ ಚುನಾವಣೆ ನಡೆಯುತ್ತಿದ್ದರೂ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಗೇನು ಕಡಿಮೆ ಇಲ್ಲ. ಮೂರು ಪಕ್ಷಗಳಿಂದ ಪ್ರತಿ ವಾರ್ಡ್‌ಗಳಲ್ಲಿ ಕನಿಷ್ಠ 8-10 ಮಂದಿ ಟಿಕೆಟ್‌ಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
ಅಭ್ಯರ್ಥಿಗಳ ಗೆಲ್ಲುವ ಸಾಮರ್ಥ್ಯದ ಆಧಾರ ಮೇಲೆ ಟಿಕೆಟ್ ಹಂಚಿಕೆಗೆ ಮೂರೂ ಪಕ್ಷಗಳು ನಿರ್ಧರಿಸಿವೆ. ವಾರ್ಡ್ ವಿಂಗಡಣೆ, ಮೀಸಲಾತಿ ಲೆಕ್ಕಾಚಾರದಲ್ಲಿ ಹಾಲಿ ಅಭ್ಯರ್ಥಿಗಳಿಗೆ ಟಿಕೆಟ್ ಕೈತಪ್ಪುವ ಬಹುತೇಕ ಸಾಧ್ಯತೆಗಳಿವೆ. ಈ ಎಲ್ಲಾ ಕಾರಣದಿಂದ ಕೊನೆ ಕ್ಷಣದಲ್ಲಿ ಟಿಕೆಟ್ ಸಿಗದವರು ಬಂಡಾಯವಾಗಿ ಸ್ಪರ್ಧಿಸುವ ಸಾಧ್ಯತೆಗಳನ್ನೂ ತಳ್ಳಿ ಹಾಕುವಂತಿಲ್ಲ.
* ಸಿ.ದಿನೇಶ್