Advertisement

ಬಾಕಿ ಪ್ರಕರಣ ಶೀಘ್ರ ಇತ್ಯರ್ಥ

05:28 PM Mar 30, 2022 | Team Udayavani |

ಬೆಳಗಾವಿ: ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲಾಗುವುದಲ್ಲದೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪರಿಶಿಷ್ಟ ಸಮುದಾಯಗಳ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯ ತಡೆಗೆ ಪೊಲೀಸ್‌ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲು ಕಾನೂನು ಸಲಹೆ ನೀಡಬೇಕು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲು ಸೂಕ್ತ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದ ಅವರು, ಚಿಕ್ಕೋಡಿ, ಅಥಣಿ, ರಾಯಬಾಗ, ನಿಪ್ಪಾಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ವಾಸವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರಾತಿಗಾಗಿ ಅನುಮತಿ ನೀಡಲಾಗುವುದು ಎಂದು ಹೇಳಿದರು.

ಕಳೆದ ಎರಡು ವರ್ಷಗಳಿಂದ ನಗರದ ಆರ್‌ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕ ಹೆಸರು ನಾಮಕರಣ ಮಾಡಬೇಕು ಎಂದು ಬೇಡಿಕೆ ಇದೆ. ಆದ್ದರಿಂದ ಈ ಬಾರಿ ಆರ್‌ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರು ನಾಮಕರಣ ಮಾಡಬೇಕು ಎಂದು ವಿಜಯ ತಳವಾರ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು, ಈ ಕುರಿತು ಯಾವುದೇ ಗೊಂದಲಗಳು ಇದ್ದಲ್ಲಿ ಶೀಘ್ರವೇ ಪರಿಹರಿಸಿ ವೀರ ಮದಕರಿ ನಾಯಕ ಹೆಸರು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನಂದಗಾಂವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಡಿಸಿಪಿ ರವೀಂದ್ರ ಗಡಾದಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಾಮನಿರ್ದೇಶಿತ ಸದಸ್ಯರಾದ ಅಶೋಕ ಅಸೋಗಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next