Advertisement

ಮಸಿ ಬಳಿದ ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಆಗ್ರಹ

05:35 PM Jun 01, 2022 | Team Udayavani |

ರಾಯಚೂರು: ರೈತ ನಾಯಕ ರಾಕೇಶ್‌ ಟಿಕಾಯತ್‌ ಮುಖಕ್ಕೆ ಮಸಿ ಬಳಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ವ್ಯವಸ್ಥಿತ ದಾಳಿಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದವು.

Advertisement

ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಆತ್ಮಾವಲೋಕನ ಸಭೆ ಹಮ್ಮಿಕೊಂಡಿದ್ದ ವೇಳೆ ರೈತ ನಾಯಕ ರಾಕೇಶ್‌ ಟಿಕಾಯತ್‌, ಯುದ್ದವೀರ್‌ ಸಿಂಗ್‌, ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಮಹಿಳಾ ರೈತ ಮುಖಂಡರ ಮೇಲೆ ಬಿಜೆಪಿ ಹಾಗೂ ಸಂಘ ಪರಿವಾರದ ಗೂಂಡಾಪಡೆಗಳು ಮುಖಕ್ಕೆ ಮಸಿ ಎರಚಿರುವುದು ಖಂಡನೀಯ. ಇದು ರೈತರಿಗೆ ಮಾಡಿದ ಅವಮಾನವಾಗಿದೆ. ತಕ್ಷಣವೇ ಈ ಗೂಂಡಾಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಗೃಹ ಸಚಿವ ಆರಗ ಜ್ಞಾನೇಂದ್ರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಹೋರಾಟಗಾರರು, ಬುದ್ಧಿಜೀವಿಗಳು, ಬರಹಗಾರರು, ಸಾಹಿತಿಗಳು ಹಾಗೂ ಜನಪರ ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಉಭಯ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next