Advertisement
ಶನಿವಾರ ರಾತ್ರಿ ನಟ ಅಂಬರೀಶ್ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು, ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅಗತ್ಯ ಬಂದೋಬಸ್ತ್ ಕಲ್ಪಿಸುವಂತೆ ಸೂಚಿಸಿದರು. ಆ ಹಿನ್ನೆಲೆಯಲ್ಲಿ ತಡರಾತ್ರಿಯೇ ಒಬ್ಬ ಹೆಚ್ಚುವರಿ ಪೊಲೀಸ್ ಆಯುಕ್ತರು, ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಕ್ರೀಡಾಂಗಣದ ಸುತ್ತ-ಮುತ್ತ ಬಂದೋಬಸ್ತ್ ಕೈಗೊಂಡು, ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
Related Articles
Advertisement
ಇನ್‌ಸ್ಪೆಕ್ಟರ್, ಸಬ್‌ಇನ್‌ಸ್ಪೆಕ್ಟರ್‌ಗಳು, 25 ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಒಂದೂವರೆ ಸಾವಿರ ಪೊಲೀಸರು ಕ್ರೀಡಾಂಗಣದಲ್ಲಿ ಭದ್ರತೆಗೆ ಇಯೋಜನೆಯಾಗೊಂಡಿದ್ದರು. ಜತೆಗೆ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿಯೂ ಕೆಎಸ್‌ಆರ್‌ಪಿ ತುಕಡಿಗಳನ್ನು ಹಾಕಲಾಗಿದ್ದು, ಒಟ್ಟಾರೆ ಇಡೀ ನಗರದಲ್ಲಿ ಮೂರು ಸಾವಿರ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿತ್ತು.
ನೂಕು ನುಗ್ಗಲು: ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ದಟ್ಟಣೆ ಉಂಟಾಗದಂತೆ ತಡೆಯಲು ಸಾರ್ವಜನಿಕರ ಸಾಲಿನಲ್ಲಿದ್ದವರನ್ನು ನಿಧಾನಗತಿಯಲ್ಲಿ ಒಳಗೆ ಬಿಡುವ ಮೂಲಕ ಪರಿಸ್ಥಿತಿ ನಿಭಾಯಿಸಿದರು. ಸರತಿ ಸಾಲಿನಲ್ಲಿದ್ದವರ ನಿಂತಲ್ಲೇ ನಿಲ್ಲುವಂತಾದ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗವೂ ನಡೆಯಿತು. ಇದರಿಂದ ಕೆಲವೆಡೆ ತುಸು ನೂಕು ನುಗ್ಗಲು ಉಂಟಾಯಿತು.
ಸುಗಮ ಸಂಚಾರ: ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುತ್ತಿದ್ದಂತೆ ಈ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಆತಂಕವಿತ್ತು. ಆದರೆ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ. ಹರಿಶೇಖರನ್ ನೇತೃತ್ವದಲ್ಲಿ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳ ಎರಡು ಭಾಗಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಂಡಲಾಯಿತು. ಅಲ್ಲದೆ, ಕ್ರೀಡಾಂಗಣದ ಸುತ್ತ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 600 ಮಂದಿ ಸಂಚಾರ ಪೊಲೀಸ್ ಸಿಬ್ಬಂದಿ ಸೇರಿದಂತೆ ನಗರದಾದ್ಯಂತ 4000 ಸಂಚಾರ ಪೊಲೀಸರು ಕರ್ತವ್ಯ ನಿರ್ವಹಿಸಿದರು.
ವಾಹನಗಳಿಗೆ ವ್ಯವಸ್ಥಿತ ಪಾರ್ಕಿಂಗ್: ಕ್ರೀಡಾಂಗಣಕ್ಕೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣ, ಕಬ್ಬನ್ ಪಾರ್ಕ್ ಆವರಣ, ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಹಾಗೂ ಕಂಠೀರವ ಕ್ರೀಡಾಂಗಣದಲ್ಲಿ ಗಣ್ಯರ ವಾಹನಗಳ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕ್ರೀಡಾಂಗಣ ಆವರಣದಲ್ಲಿ 8 ಆ್ಯಂಬುಲೆನ್ಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿತ್ತು.
* ಮೋಹನ್ ಭದ್ರಾವತಿ