ಬೆಂಗಳೂರು: ಕಾಂಗ್ರೆಸ್ ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ಕುರಿತು ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಸೋಮವಾರ ಸಂಜೆ ಅಥವಾ ಮಂಗಳವಾರ ಆಗಮಿಸುವ ಸಾಧ್ಯತೆಯಿದೆ.
ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ನಡೆಯುತ್ತಿರು ವುದರಿಂದ ಪಕ್ಷದ ಹಿರಿಯ ನಾಯಕರ ಅಭಿಪ್ರಾಯ ಪಡೆದು ತೀರ್ಮಾನ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಅದರ ಜತೆಗೆ, ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಂತೆಯೂ ನಾಯಕರ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೇ ಪ್ರತಿಪಕ್ಷ ನಾಯಕರನ್ನಾಗಿ ಮುಂದುವರಿಸಬೇಕೆಂಬ ಒತ್ತಡವೂ ಹೈಕಮಾಂಡ್ ಮೇಲಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಹಾಗೂ ಆರ್.ವಿ.ದೇಶಪಾಂಡೆ ಕೂಡ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಆದರೆ, ಮುಂದಿನ ವಿಧಾನಸಭಾ ಚುನಾವಣೆ ಯನ್ನು ಗಮನದಲ್ಲಿಟ್ಟುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ಶಾಸಕಾಂಗ ಪಕ್ಷದ ನಾಯಕ, ಪ್ರತಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನವನ್ನು ಸಾಮಾಜಿಕ ನ್ಯಾಯದ ಲೆಕ್ಕಾಚಾರದಲ್ಲಿ ಎಲ್ಲ ಸಮುದಾಯದ ನಾಯಕರನ್ನೂ ಪರಿಗಣಿಸುವ ಲೆಕ್ಕಾಚಾರ ಹೊಂದಿದೆ ಎನ್ನಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತರಾಗುವ ಒಬ್ಬರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಿಸುವ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ ಆಲೋಚನೆ ನಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.