Advertisement

ಕೇಂದ್ರಕ್ಕೆ ಒತ್ತಡ: ಕೋರ್ಟ್‌ಗೆ ಮನವಿ ಇಲ್ಲ

06:10 AM Mar 23, 2018 | Team Udayavani |

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡದಂತೆ ಕೇಂದ್ರ ಸರ್ಕಾದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Advertisement

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಸದರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ತಿಳಿಸಿಲ್ಲ. ಆದರೆ, ತಮಿಳುನಾಡು ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತಿರುವುದರಿಂದ ಯಾವುದೇ ಕಾರಣಕ್ಕೂ ನೀರು ನಿರ್ವಹಣಾ ಮಂಡಳಿ ರಚಿಸದಂತೆ ಒತ್ತಡ ಹೇರಲು ನಿರ್ಧರಿಸಲಾಗಿದೆ.

ಅಲ್ಲದೇ ಈಗಾಗಲೇ ಸುಪ್ರೀಂಕೊರ್ಟ್‌ ನೀಡಿರುವ ತೀರ್ಪಿನ ಮೇಲೆ ಪುನರ್‌ ಪರಿಶೀಲನಾ ಅರ್ಜಿಯನ್ನೂ ಹಾಕದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡುತ್ತಿರುವ ಫಾಲಿ ಎಸ್‌. ನಾರಿಮನ್‌ ಮತ್ತು ಶ್ಯಾಮ್‌ ದಿವಾನ್‌ ಅವರೂ ಕೂಡ ಮೇಲ್ಮನವಿ ಸಲ್ಲಿಸದಂತೆ ಸೂಚಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಅವರ ಸಲಹೆಯಂತೆ ಈ ತೀರ್ಮಾನ ಕೈಗೊಂಡಿದೆ.

ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪ್ರತಿಪಕ್ಷಗಳೂ ಸಹಮತ ವ್ಯಕ್ತಪಡಿಸಿದ್ದು, ಬಿಜೆಪಿ ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಜೊತೆಗಿರುವುದಾಗಿ ಹೇಳಿದೆ. ಆದರೆ, ಈ ಬಗ್ಗೆ ಇನ್ನೊಂದು ಬಾರಿ ರಾಜ್ಯದ  ಪರ ವಾದ ಮಾಡುವ ವಕೀಲರ ಅಭಿಪ್ರಾಯ ಪಡೆದುಕೊಳ್ಳುವಂತೆ ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಆದರೆ, ಸುಪ್ರೀಂ ಕೋರ್ಟ್‌ ಸ್ಕೀಂ (ಉಸ್ತುವಾರಿ ತಂಡ) ಮಾಡಲು ಆದೇಶದಲ್ಲಿ ಹೇಳಿರುವುದರಿಂದ ನಾಲ್ಕೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಆದೇಶ ಪಾಲನೆ ಕುರಿತು ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಹಿತಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆಯ ನಂತರ ಮಾತನಾಡಿದ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌, ಕಾವೇರಿ ನ್ಯಾಯಮಂಡಳಿಯಾಗಲಿ ಅಥವಾ ಸುಪ್ರೀಂ ಕೊರ್ಟ್‌ ಆದೇಶದಲ್ಲಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸೂಚಿಸಿಲ್ಲ. ಈ ಬಗ್ಗೆ ರಾಜ್ಯದ ಪರ ವಾದ ಮಾಡುವ ನ್ಯಾಯವಾದಿಗಳೂ ಕೂಡ ಸುಪ್ರೀಂ ಕೊರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸದಂತೆ ಸೂಚನೆ ನೀಡಿದ್ದಾರೆ. ಅದರಂತೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿದೆ.

ರಾಜ್ಯದ ಹಿತಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಎಲ್ಲರೂ ಒಗ್ಗಟ್ಟಿನಿಂದ ತೀರ್ಮಾನ ಕೈಗೊಂಡಿದ್ದೇವೆ. ಸುಪ್ರೀಂ ಕೋರ್ಟ್‌ ಆದೇಶ ಪಾಲನೆಗೆ ಅಧಿಕಾರಿಗಳ ಮಟ್ಟದಲ್ಲಿ ಸ್ಕೀಮ್‌ ಜಾರಿ ಸಂದರ್ಭದಲ್ಲಿ ಅಧಿಕಾರಿಗಳು ರಾಜ್ಯದ ಹಿತ ಕಾಯುತ್ತಾರೆ. ಕೇರಳದ ಮೇಲ್ಮನವಿ ಕುರಿತು ನ್ಯಾಯವಾದಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕಾವೇರಿ ನೀರಿನ ವಿಷಯದಲ್ಲಿ ನಾವೆಲ್ಲ ಒಟ್ಟಾಗಿದ್ದೇವೆ. ಸುಪ್ರೀಂ ಕೋರ್ಟ್‌ ಆದೇಶದಲ್ಲಿಯೇ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಕೇಂದ್ರ ಸರ್ಕಾರ ಸ್ಕೀಮ್‌ ಜಾರಿಗೊಳಿಸಲು ನಾಲ್ಕೂ ರಾಜ್ಯಗಳ ಅಭಿಪ್ರಾಯ ಕೇಳಿದೆ.
– ಅನಂತಕುಮಾರ್‌, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next