Advertisement
ಶನಿವಾರ ಬೆಳಗ್ಗೆ 10ಕ್ಕೆ ಬೆಂಗಳೂರಿನ ಎಚ್ .ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಹೊರಟು 11ಕ್ಕೆ ದಾವಣಗೆರೆಯ ಸರ್ಕಾರಿ ಐಟಿಐ ಹೆಲಿಪ್ಯಾಡ್‌ಗೆ ಆಗಮಿಸುವರು ಎಂಬ ಸುದ್ದಿ ತಿಳಿದ ನೂರಾರು ಜನರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿಕ್ಕಾಗಿ ಬಂದಿದ್ದರು.
Related Articles
Advertisement
ರೈತರ ಸಾಲ ಮನ್ನಾದಂತೆ ಕೊಳವೆ ಬಾವಿ ಸಾಲ ಮನ್ನಾ ಮಾಡಬೇಕು ಎಂದು ಕೆಲ ರೈತರಿಂದ ಒತ್ತಾಯ ಕೇಳಿ ಬಂದಾಗ, ಆಯ್ತಣ್ಣ ನೋಡೊಣ… ಎಂದು ನಸು ನಗುತ್ತಾ ಮುನ್ನಡೆದರು. 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ| ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಹಳೇಚಿಕ್ಕನಹಳ್ಳಿ ಎರಗುಂಟೆ ಗ್ರಾಮದ ದಲಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ (ಪ್ರೊ| ಬಿ.ಕೃಷ್ಣಪ್ಪ) ಜಿಲ್ಲಾ ಸಮಿತಿ ಕಾರ್ಯಕರ್ತರು, ಹಾಸ್ಟೆಲ್ ಹೊರಸಂಪನ್ಮೂಲ ನೌಕರರಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಕೇರಳ ಮಾದರಿಯಲ್ಲಿ ಮೆಕ್ಕೆಜೋಳ, ಭತ್ತಮ ಹತ್ತಿ, ಸೂರ್ಯಕಾಂತಿಗೆ ಬೋನಸ್ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ದ ಕಾರ್ಯಕರ್ತರು, ಬೆಂಬಲ ಬೆಲೆಯ ಖರೀದಿ ಕೆಂದ್ರ, ರೈತರ ರಾಷ್ಟ್ರೀಕೃತ ಬ್ಯಾಂಕಿನ ಸಾಲಮನ್ನಾ, ದಲ್ಲಾಲರಿಂದ ವಂಚನೆಗೊಳಗಾದ ರೈತರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ಬಾಪೂಜಿ ಆಸ್ಪತ್ರೆ ಮುಂಭಾಗದ ಸಿ.ಜೆ. ಆಸ್ಪತ್ರೆ ಕಾಂಪೌಂಡ್‌ಗೆ ಪುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಮಳಿಗೆ ಕಟ್ಟಿಸಿಕೊಟ್ಟು ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಒತ್ತಾಯಿಸಿ ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘ, ನಿರ್ಗತಿಕ ಬಡ ಅಂಗವಿಕಲರಿಗೆ ಆಶ್ರಯ ಮನೆ ಕಲ್ಪಿಸಿಕೊಡುವಂತೆ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ, ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಬೇಕು ಹಾಗೂ ಪ್ರತೀ ವರ್ಷ ಅರ್ಜಿ ಕರೆದು ಸಂದರ್ಶನ ಮಾಡದೇ, ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯಾನಿರ್ವಹಿಸಿದವರನ್ನೇ ಮುಂದುವರೆಸಿ ನಿಯೋಜಿಸುವಂತೆ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಅತಿಥಿ ಉಪನ್ಯಾಸಕರು ಸಿಎಂಗೆ ಮನವಿ ಸಲ್ಲಿಸಿದರು.
ದಾವಣಗೆರೆಯಲ್ಲಿ ಕೈಗಾರಿಕೆಗಳನ್ನು ಹಾಕಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾ ಸಮಿತಿ, ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಹಾಗೂ ವೀರಶೈವ ಜಂಗಮರಿಗೆ ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಯುವಂತೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್ ಗೆ ಒಳಗಾಗಿರುವ ರೋಗಿಗಳಿಗೆ ಮಸಾಶನ ನೀಡುವಂತೆ ತುಮಕೂರು ಶ್ರೀ ಸಿದ್ಧಗಂಗಾಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮಿ, ಉಪನ್ಯಾಸಕ ಹಾಗೂ ಪ್ರಾಂಶುಪಾಲರ ವೇತನಕ್ಕೆ ಸಂಬಂಧಿಸಿದಂತೆ ಕುಮಾರ್ ನಾಯಕ್ ವರದಿ ಶಿಫಾರಸು ಯಥಾವತ್ತಾಗಿ ಜಾರಿ ಮತ್ತು ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.