ಮೈಸೂರು: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಬಹುಕೋಟಿ ರಫೇಲ್ ಯುದ್ಧ ವಿಮಾನ ಖರೀದಿ ಹಗರಣ ವಿಷಯದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ನಗರ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ತನ್ವೀರ್, 2007ರಲ್ಲಿ ಯುಪಿಎ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಗೆ ಪಾರದರ್ಶಕವಾಗಿ ಒಪ್ಪಂದ ಮಾಡಿಕೊಂಡಿತ್ತು.
ಆದರೆ, ಮೋದಿ ಸರ್ಕಾರ ಯುದ್ಧ ವಿಮಾನ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆಸಿದೆ. ಫ್ರಾನ್ಸ್‌ನ ಮಾಜಿ ಅಧ್ಯಕ್ಷರೇ ರಫೇಲ್ ಯುದ್ಧ ವಿಮಾನ ಖರೀದಿ ವ್ಯವಹಾರದಲ್ಲಿ 30 ರಿಂದ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಿದರು.
ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಪೇಪರ್ ಟೈಗರ್ ಆಗಿದ್ದಾರೆ. ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸದ ಅವರನ್ನು ಟ್ವಿಟರ್‌ನಲ್ಲಷ್ಟೇ ಕಾಣುವಂತಾಗಿದೆ ಎಂದು ದೂರಿದ ಅವರು, ಸ್ವತ್ಛ ಭಾರತ್ ಹೆಸರಲ್ಲಿ ಕಂಡಲ್ಲೆಲ್ಲಾ ಪೊರಕೆ ಹಿಡಿದು ಮಾಧ್ಯಮಗಳಿಗೆ ಮುಖ ತೋರಿಸುವ ಬಿಜೆಪಿ ಮುಖಂಡರಿಗೆ ನಿಜವಾದ ಬದ್ಧತೆ ಇದ್ದರೆ, ಪೌರ ಕಾರ್ಮಿಕರು ಪ್ರತಿಭಟನೆ ಮಾಡುತ್ತಿರುವ ಈ ಸಂದರ್ಭದಲ್ಲಿ ಮೈಸೂರಿನ ಬೀದಿಗಳನ್ನು ಸ್ವತ್ಛ ಮಾಡಲಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಸದ ಆರ್.ಧ್ರುವನಾರಾಯಣ, ಮಾಜಿ ಸಂಸದ ವಿಜಯಶಂಕರ್, ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಹಾಜರಿದ್ದರು.