ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೇ ವೇಳೆ ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಚರ್ಚಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಬಿಎಸ್ ವೈ ಮಾಹಿತಿ ಪಡೆದರು.
ಸಿಎಂ ಚರ್ಚೆಯ ಮುಖ್ಯಾಂಶಗಳು
* ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಮಳೆಯಾಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಲಾಯಿತು.
* ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದುಬರುವ ನೀರಿನ ಪ್ರಮಾಣದ ಕುರಿತು ಜಾಗೃತರಾಗಿರುವಂತೆ ತಿಳಿಸಿದರು. ಅಲ್ಲದೆ, ರಾಜಾಪೂರ ಬ್ಯಾರೇಜಿನಲ್ಲಿ ರಾಜ್ಯದ ಎಂಜಿನಿಯರ್ ಒಬ್ಬರನ್ನು ನಿಯೋಜಿಸುವಂತೆ ಸೂಚಿಸಲಾಯಿತು.
* ಅಕ್ಟೋಬರ್ ವರೆಗೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಪ್ರವಾಹ ಕುರಿತು ಎಚ್ಚರ ವಹಿಸಿ. ಮಣ್ಣಿನ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬೆಳೆಹಾನಿಯಾಗದಂತೆ ಎಚ್ಚರ ವಹಿಸಲು ಸೂಚಿಸಿದರು.
* ಉತ್ತಮ ಮಳೆಯಾಗಿ, ಬಂಪರ್ ಬೆಳೆ ಬರುವ ಸಾಧ್ಯತೆ ಇದ್ದು, ಬೇಡಿಕೆ ಕಡಿಮೆ ಇರುವ ಕಾರಣ ಗೋಡೌನ್ ಗಳನ್ನು ಗುರುತಿಸಿ, ಕೃಷಿ ಉತ್ಪನ್ನ ದಾಸ್ತಾನಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.