ಶಿವಮೊಗ್ಗ: ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಂಕಿಅಂಶಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಸಾಂಖ್ಖಿಕ ದಿನಾಚರಣೆ ಹಾಗೂ ಪ್ರೊ| ಪಿ.ಸಿ.ಮಹಾಲನೋಬಿಸ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಜನೆಗಳನ್ನು ಅನುಷ್ಠಾನ ಗೊಳಿಸುವ ಮೊದಲು ಅಂಕಿಅಂಶಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅದನ್ನು ವಿಶ್ಲೇಷಿಸಲಾಗುತ್ತದೆ. ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಆರ್ಥಿಕ ಯೋಜನೆಗಳನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸುವಲ್ಲಿ ಪ್ರೊ| ಪ್ರಶಾಂತ ಚಂದ್ರ ಮಹಾಲನೋಬಿಸ್ ಅವರ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಜನ್ಮ ದಿನವನ್ನು ಸಾಂಖ್ಖಿಕ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಸಾಂಖ್ಖಿಕ ಅಧಿಕಾರಿ ಬ್ರಿಜೆಟ್ ವರ್ಗಿಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾಲನೋಬಿಸ್ ಅವರು ಎರಡನೇ ಪಂಚವಾರ್ಷಿಕ ಯೋಜನೆಯ ಯಶಸ್ಸಿನ
ರೂವಾರಿಯಾಗಿದ್ದಾರೆ. ಈ ಬಾರಿಯ ಸಾಂಖ್ಖಿಕ ದಿನವನ್ನು ಲಿಂಗ ಸಮಾನತೆ ಸಾಧಿಸಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳನ್ನು ಸಶಕ್ತರನ್ನಾಗಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಉಮಾ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಗಣಪತಿ ನಾಯ್ಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ
ಪಂಚಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಪುಷ್ಪಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.