ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಶಂಕಿತ ಅಥವಾ ಖಚಿತ ಕೊರೊನಾ ವೈರಸ್ (ಕೋವಿಡ್-19) ಪ್ರಕರಣ ದಾಖಲಾಗಿರುವುದಿಲ್ಲ. ಕೊರೊನಾ ವೈರಸ್ ಸೋಂಕು ಹರಡದಂತೆ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಕ್ರಮವಾಗಿ ಜಿಲ್ಲೆ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಕ್ವಾರೆಂಟಿನ್ ಕೇಂದ್ರ ಹಾಗೂ ಐಸೋಲೆಟ್ ವಾರ್ಡ್‌ಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಸೌಲಭ್ಯ ವ್ಯವಸ್ಥೆ: ಜಿಲ್ಲಾ ಕೇಂದ್ರದಲ್ಲಿ ಹಳೆ ಆಸ್ಪತ್ರೆಯಲ್ಲಿ ಕ್ವಾರೆಂಟಿನ್ ಕೇಂದ್ರ ಹಾಗೂ ಐಸೋಲೆಟ್ ಕೇಂದ್ರ ತೆರೆಯಲಾಗಿದೆ. ಇದೇ ರೀತಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕ್ವಾರೆಂಟಿನ್ ಕೇಂದ್ರಗಳು ತೆರೆದು ಅವಶ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ವದಂತಿ ಹಬ್ಬಿಸಿದರೆ ಕ್ರಮ: ಕೊರೊನಾ ವೈರಸ್ ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಆಶಾ ಕಾರ್ಯಕರ್ತೆಯರಿಗೆ, ಪೊಲೀಸ್ ಸಿಬ್ಬಂದಿಗೆ, ಆರೋಗ್ಯ ಇಲಾಖೆ ವೈದ್ಯರಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ವೈರಸ್ ಬಗ್ಗೆ ಕೆಲವರು ಸುಳ್ಳು ವದಂತಿಗಳು ಹಬ್ಬಿಸಿ ಭಯ, ಭೀತಿ ಮೂಡಿಸುತ್ತಿದ್ದಾರೆ. ಅಪಪ್ರಚಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲೆಯಿಂದ ವಿದೇಶಕ್ಕೆ ಹೋಗಿ ಬಂದಿರುವವರನ್ನು ಪತ್ತೆ ಹಚಿr ತಪಾಸಣೆ ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಹಾಗೂ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಿಲ್ಲೆಗೆ ಹತ್ತಿರವಾಗಿರುವುದರಿಂದ ಜಿಲ್ಲೆಗೆ ವಿದೇಶಗಳಿಂದ ಬರುವವರ ಮೇಲೆ ನಿಗಾ ವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೆಕ್ಷಣಾ ಘಟಕ ಹಾಗೂ ಇನ್ನಿತರೆ ಸಮಿತಿಗಳ ಕಾರ್ಯನಿರ್ವಹಿಸುತ್ತಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಜಿಲ್ಲೆಯ ಪ್ರಭಾರಿ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಿ.ಎಂ.ಯೋಗೇಶ್ ಗೌಡ ಉಪಸ್ಥಿತರಿದ್ದರು.
104 ಕರೆ ಮಾಡಿ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಹಾಗೂ ಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಜ್ವರ, ಉಸಿರಾಟದ ತೊಂದರೆ, ನೆಗಡಿ, ಕೆಮ್ಮು ರೋಗ ಲಕ್ಷಣಗಳು ಕಂಡುಬಂದಲ್ಲಿ ಮೂಗು ಮತ್ತು ಬಾಯಿಯನ್ನು ಕರವಸ್ತ್ರ, ಮಾಸ್ಕ್ ಮುಚ್ಚಿಕೊಂಡು ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ಈ ರೋಗದ ಲಕ್ಷಣಗಳಿದ್ದರೆ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು.