ಬೆಂಗಳೂರು: ಸರ್ಕಾರವನ್ನು ನಡೆದಷ್ಟು ದಿನ ನಡೆಸಿಕೊಂಡು ಹೋಗುವುದರ ಜತೆ ಪಕ್ಷ ಸಂಘಟನೆ ಕಡೆ ಹೆಚ್ಚಿನ ಗಮನ ನೀಡುವಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಪಕ್ಷದ ಮುಖಂಡರಿಗೆ ಸಲಹೆ ನೀಡಿದ್ದಾರೆ. ಅಲ್ಲದೆ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ, ಸಂಪುಟ ಪುನಾರಚನೆಗೆ ಕೈ ಹಾಕುವಂತೆ ರಾಜ್ಯ ನಾಯಕರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.
ಗುರುವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಹಿರಿಯ ಮುಖಂಡರ ಸಭೆಯಲ್ಲಿ ಬಹುತೇಕ ನಾಯಕರು ಮೈತ್ರಿ ಮಾಡಿಕೊಂಡಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಯಾವುದೇ ರೀತಿಯ ಲಾಭವಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದಿಂದ ಮೈತ್ರಿ ಸರ್ಕಾರಕ್ಕೆ ಗಂಡಾಂತರ ಎದುರಾಗಿರುವುದರಿಂದ ಅತೃಪ್ತ ಶಾಸಕರನ್ನು ಉಳಿಸಿಕೊಳ್ಳಲು ಸಂಪುಟ ಪುನಾರಚನೆ ಮಾಡುವ ಕುರಿತಂತೆ ಹಿರಿಯ ನಾಯಕರ ಅಭಿಪ್ರಾಯ ಪಡೆದುಕೊಳ್ಳಲಾಗಿದ್ದು, ಸಂಪುಟ ವಿಸ್ತರಣೆ ಅಥವಾ ಪುನಾರಚನೆಯನ್ನು ಪರಿಸ್ಥಿತಿಯನ್ನು ಗಮನಿಸಿ ಮಾಡಿಕೊಳ್ಳುವಂತೆ ಹಿರಿಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಅದಕ್ಕಿಂತ ಹೆಚ್ಚಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್, ರಾಜ್ಯದಲ್ಲಿ ತನ್ನ ಅಸ್ಥಿತ್ವ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದು, ಮುಂದಿನ ದಿನಗಳಲ್ಲಿ ವಿಶೇಷವಾಗಿ ದಕ್ಷಿಣ ಕರ್ನಾಟಕ ಭಾಗದಲ್ಲಿ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗದಂತೆ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್, ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ,
-ಬಸವರಾಜ್ ರಾಯರೆಡ್ಡಿ, ಕೆ.ಎಚ್.ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಟಿ.ಬಿ.ಜಯಚಂದ್ರ, ಮೋಟಮ್ಮ, ಅಮರೇಗೌಡ ಬಯ್ನಾಪುರ, ಶರಣಬಸಪ್ಪ ದರ್ಶನಾಪುರ, ಬಿ.ಎಲ್. ಶಂಕರ್, ಡಾ. ಎಚ್.ಸಿ.ಮಹದೇವಪ್ಪ, ಆರ್.ಧ್ರುವನಾರಾಯಣ ಸೇರಿದಂತೆ ಸುಮಾರು ಮೂವತ್ತಕ್ಕೂ ಹೆಚ್ಚು ನಾಯಕರು ಪಾಲ್ಗೊಂಡಿದ್ದರು.