ಬೆಂಗಳೂರು: ಲೋಕಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬಿಜೆಪಿಯ ಮೂರು ತಂಡಗಳು ಇಂದಿನಿಂದ ಎಂಟು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದೆ.
ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರವಾಸವೂ ಇದಾಗಿರುವುದರಿಂದ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿಯ ಮೊದಲ ಹೋರಾಟ ಎಂದೇ ಹೇಳಲಾಗುತ್ತಿದೆ.
ಪ್ರತಿಪಕ್ಷ ನಾಯಕರೂ ಆಗಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವ ತಂಡ ಬೀದರ್‌ನಿಂದ ಪ್ರವಾಸ ಆರಂಭಿಸಲಿದ್ದು, ಮಾಜಿ ಸಚಿವ ಗೋವಿಂದ ಕಾರಜೋಳ, ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸದಸ್ಯ ರವಿಕುಮಾರ್ ತಂಡದಲ್ಲಿರಲಿದ್ದಾರೆ.
ಆಗಸ್ಟ್ 16 ರವರೆಗೂ ಈ ತಂಡ ಬೀದರ್, ಕಲಬುರಗಿ, ಬೆಂಗಳೂರು ಮಹಾನಗರ, ಬೆಂಗಳೂರು ನಗರ ಜಿಲ್ಲೆ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ತಂಡ ಆ.9ರಿಂದ ಆ.13ರವರೆಗೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮಹಾನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಪ್ರವಾಸ ನಡೆಸಲಿದೆ.
ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡ ಆ.9ರಿಂದ ಆ.12ರವರೆಗೆ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಪ್ರವಾಸ ಕೈಗೊಳ್ಳಲಿದೆ.