Advertisement

ಕುವೆಂಪು ಪುಸ್ತಕಗಳ ಅಧ್ಯಯನ ಅಗತ್ಯ; ಶಂಕರಪ್ಪ ವನಕಿಹಾಳ

05:56 PM Dec 30, 2021 | Team Udayavani |

ಬೆಳಗಾವಿ: ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಕುವೆಂಪು ರಚಿಸಿದ ಕಾವ್ಯಗಳ ಮೂಲಕ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಂಕರಪ್ಪ ವನಕಿಹಾಳ ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬಸವರಾಜ ಕಟ್ಟಿಮನಿ ಸಭಾ ಭವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಬುಧವಾರ ಏರ್ಪಡಿಸಲಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದಅವರು,ಪ್ರತಿಯೊಬ್ಬರಿಗೆ ಹೃದಯವಂತಿಕೆ, ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎಂಬುದನ್ನು ತಮ್ಮ ಕಾವ್ಯಗಳ ಮೂಲಕ ರಾಷ್ಟ್ರಕವಿ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದರು ಎಂದರು.

ಕುವೆಂಪು ಅವರ ಈ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಅವರ ಪುಸ್ತಕಗಳನ್ನು ಅಧ್ಯಯನ ಮಾಡುವುದು ಅತ್ಯವಶ್ಯಕವಾಗಿದೆ. ಕುವೆಂಪು ಅವರ ವೈಚಾರಿಕತೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಅವರ ಸಾಧನೆ ಅನನ್ಯವಾದುದು ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ನಿರ್ಮಲಾ ಬಟ್ಟಲ ಅವರು, ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ. ‌ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ರಚಿಸಿ, ರಾಜ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿದ್ದಾರೆ ಎಂದರು.

ರಾಷ್ಟ್ರ ಕವಿ ಕುವೆಂಪು ಅವರಿಗೆ ಯುಗದ ಕವಿ ಹಾಗೂ ಜಗದ ಕವಿ ಎಂಬ ಬಿರುದುಗಳಿವೆ. ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದಲ್ಲಿ ವಿಭಿನ್ನ ಆಯಾಮಗಳ ಮೂಲಕ ವಿಶ್ವ ಮಾನವ ಸಂದೇಶ ವಿಶ್ವಕ್ಕೆ ಪರಿಚಯಿಸಿದ ಮೊದಲ ಯುಗದ ಕವಿ ಕುವೆಂಪು ಅವರು ಎಂದು ಹೇಳಿದರು.

Advertisement

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂಜಯ ಬೆಳಗಾಂವಕರ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು. ಜಮಾದಾರ ನಿರೂಪಿಸಿ, ವಂದಿಸಿದರು ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುನೀತಾ ದೇಸಾಯಿ ಹಾಗೂ ತಂಡದವರು ಕುವೆಂಪು ಅವರ ಗೀತೆಗಳನ್ನು ಪ್ರಸ್ತುತಪಡಿಸಿದರು. ಪ್ರೇಮಾ ಉಪಾಧ್ಯೆ ಮತ್ತು ಮಹೇಶ ಕಾಂಬಳೆ ತಂಡದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next