ಕಲಬುರಗಿ: ಜಿಲ್ಲಾ ಸ್ವೀಪ್ ಸಮಿತಿಯಿಂದ ರಾಜ್ಯದಲ್ಲಿಯೇ ವಿನೂತನವಾಗಿ ಮತದಾರರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡುತ್ತಿದೆ ಎಂದು ಚುನಾವಣಾ ಮತದಾರರ ಪಟ್ಟಿ ವೀಕ್ಷಕ ಮೊಹಮ್ಮದ್ ಮೊಹಸಿನ್ ಹೇಳಿದರು. ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಗರದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಚುನಾವಣೆ ಮಹತ್ವ ತಿಳಿಸುವ ನ್ಯೂಟನ್ ಚಲನಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ-ಕಾಲೇಜು ಮಕ್ಕಳಲ್ಲಿ ಮತದಾನದ ಮಹತ್ವ ತಿಳಿಸಲು ಸಿನಿಮಾ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, 18-18 ಮಾದರಿಯಲ್ಲಿ ಕ್ರೀಡೆಗಳು, ವಿವಿಧ ಸ್ಪರ್ಧೆಗಳನ್ನು ಕಲಬುರಗಿ ಸ್ವೀಪ್ ಸಮಿತಿಯಿಂದ ಏರ್ಪಡಿಸಿದೆ ಎಂದು ಮೆಚ್ಚುಗೆ
ವ್ಯಕ್ತಪಡಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತದಾರರ ಪಟ್ಟಿಯಲ್ಲಿರುವ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಅಭ್ಯರ್ಥಿಗಳು ಮತ ಚಲಾಯಿಸಲು ಆಮಿಷ ಒಡ್ಡುತ್ತಿದ್ದರೆ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಆಮಿಷಗಳಿಗೆ ಒಳಗಾಗದೇ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ನಕ್ಸಲ್ ಪ್ರದೇಶಗಳಲ್ಲಿ ಮತದಾನದ ಪ್ರಕ್ರಿಯೆ, ಮತದಾನ ಪ್ರಕ್ರಿಯೆಯಲ್ಲಿ ಮತದಾರರ ಪಾತ್ರದ ಕುರಿತು ನ್ಯೂಟನ್ ಚಿತ್ರದಲ್ಲಿ ಬಿಂಬಿಸಲಾಗಿದೆ. ಈ ಚಿತ್ರವನ್ನು ಯುವ ಮತದಾರರಿಗೆ ತೋರಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
ಫೆ. 25ರ ರವಿವಾರವನ್ನು ಸ್ವೀಪ್ ರವಿವಾರ ಎಂದು ಪರಿಗಣಿಸಿ ಆಚರಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಚಟುವಟಿಕೆ ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.