ಬೆಂಗಳೂರು: ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆ ನಮಗೆ ಪ್ರತಿಷ್ಠೆಯಾಗಿದ್ದು ಅ.29 ರಿಂದ ನಾನು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತ. ರಾಮನಗರ, ಮಂಡ್ಯದಲ್ಲಿ ಜೆಡಿಎಸ್ ಗೆಲುವು ಶತಸಿದ್ಧ. ಜಮಖಂಡಿ ಸೇರಿ ಐದೂ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ಅ.29 ರಿಂದ ನಾನು ರಾಜ್ಯ ಜೆಡಿಎಸ್ ಪದಾಧಿಕಾರಿಗಳ ತಂಡದ ಜತೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದೇನೆ. ಈಗಾಗಲೇ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭ್ಯರ್ಥಿಗಳ ಗೆಲುವಿಗೆ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಐದು ಕ್ಷೇತ್ರಕ್ಕೆ ಉಸ್ತುವಾರಿಗಳನ್ನು ನೇಮಿಸಿದ್ದು ಎಲ್ಲರೂ ಆಯಾ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿಸಿದರು.
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪಕ್ಷದ ನಾಯಕರು ಬಂದು ಆರೋಗ್ಯ ವಿಚಾರಿಸಲಿಲ್ಲ ಎಂದು ಬೇಸರಗೊಂಡಿರುವ ಕುರಿತು ಪ್ರತಿಕ್ರಿಯಿಸಿ, ಆ ರೀತಿ ಯಾವುದೇ ಬೇಸರ ಇಲ್ಲ. ಪ್ರಜ್ವಲ್ ರೇವಣ್ಣ ಸೇರಿ ಹಲವು ನಾಯಕರು ಬಂದಿದ್ದರು. ಮತ್ತೆ ಕೆಲವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು. ಅಂತಹ ಸಣ್ಣ ವಿಚಾರಗಳಿಗೆ ನಾನು ಬೇಸರಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಐದೂ ಕ್ಷೇತ್ರಗಳ ಉಪ ಚುನಾವಣೆ, ರಾಮನಗರ, ಮಂಡ್ಯ, ಶಿವಮೊಗ್ಗದಲ್ಲಿ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲ ವಿಚಾರಗಳಲ್ಲೂ ನಾವೆಲ್ಲರೂ ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದ್ದೇವೆ. ಪಕ್ಷದ ಗೆಲುವಿಗೆ ಎಲ್ಲ ಉಸ್ತುವಾರಿಗಳೂ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.