ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮುಂದಿನ ಎರಡು ತಿಂಗಳ ಕಾಲ ಸಂಜೆ ಸಮಯದಲ್ಲಿ ಶಾಲೆಯಲ್ಲಿಯೇ ಉಪಾಹಾರ ವ್ಯವಸ್ಥೆ ಕಲ್ಪಿಸಿಕೊಡಲು ಚಿಂತನೆ ನಡೆಸಲಾಗುವುದು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಹಾಗೂ ವಸತಿ ನಿಲಯಗಳ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಬಸ್ ವ್ಯವಸ್ಥೆ: ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಎದುರಾದರೂ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಬಗೆಹರಿಸಬೇಕು. ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ. ಈ ನಿಟ್ಟಿನಲ್ಲಿ ಆಯಾ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ನೀಡಿ ಉತ್ತೇಜಿಸಬೇಕು ಎಂದರು.
ಉತ್ತಮ ಫಲಿತಾಂಶ ನಿರೀಕ್ಷೆ: ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಮಾತನಾಡಿ, ಶಾಲಾ ಶಿಕ್ಷಕರು ಸಮಾಜವನ್ನು ನಿರ್ಮಾಣ ಮಾಡುವ ನಿರ್ಮಾಪಕರು. ಪ್ರಸ್ತುತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ 287 ಶಾಲೆಗಳಲ್ಲಿಯೂ ಉತ್ತಮ ಫಲಿತಾಂಶದ ಗುರಿ ಹೊಂದಿರುವ ನಿರೀಕ್ಷೆಯಿದ್ದು, ಗುರಿ ಸಾಧಿಸಲು ಶಿಕ್ಷಕರ ಸಹಕಾರ ಅತ್ಯಗತ್ಯ ಎಂದರು. ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿತಾದೃಷ್ಟಿಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೋಸ್ಕರ ಪ್ರತಿ ದಿನ ಅನುಸರಿಸುವ ಹೊಸ ದಿನಚರಿಯೊಂದನ್ನು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್, ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿ ಬಸವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷಾ ನೋಡಲ್ ಅಧಿಕಾರಿ ಶಿವಲಿಂಗಯ್ಯ, ಡಯಟ್ ಪ್ರಾಂಶುಪಾಲ ಕೃಷ್ಣಪ್ಪ, ಚಿಕ್ಕಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶಾಂತಲ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ್ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮೂಲ ಸೌಕರ್ಯಕ್ಕೆ ನರೇಗಾ ಬಳಸಿಕೊಳ್ಳಿ: ಜಿಲ್ಲೆಯ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಆಯಾ ಗ್ರಾಪಂಗಳ ಅಧ್ಯಕ್ಷರೊಂದಿಗೆ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಮೂಲ ಸೌಕರ್ಯಗಳಿಲ್ಲದ ಶಾಲೆಗಳಲ್ಲಿ ಕಾಂಪೌಂಡ್ ಕಟ್ಟಡ ನಿರ್ಮಾಣ, ಶೌಚಾಲಯ ನಿರ್ಮಾಣ ಹಾಗೂ ಕೈ ತೋಟಗಳನ್ನು ನಿರ್ಮಾಣ ಮಾಡುವುದಕ್ಕೆ ಕ್ರಮ ಜರುಗಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶದ ನಂತರ 3 ಸರ್ಕಾರಿ ಶಾಲೆಗಳು, 1 ವಸತಿ ಶಾಲೆ ಹಾಗೂ 1 ಅನುದಾನಿತ ಶಾಲೆಗಳಿಗೆ ತಲಾ 50 ಸಾವಿರ ರೂ. ಮೊತ್ತದ ಬಹುಮಾನವನ್ನು ನಾನು ವೈಯುಕ್ತವಾಗಿ ನೀಡುತ್ತೇನೆ ಎಂದರು.