ಮೈಸೂರು: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಹೋರಾಟ ಮಾಡಲಿದ್ದು, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮುಂದಿನ ವಾರದಿಂದ ರಾಜಾದ್ಯಂತ ಪ್ರವಾಸ ಮಾಡುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಬಿಹಾರ ಮಾದರಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮಹಾ ಘಟಬಂಧನ್ ರಚನೆ ಮಾಡಿಕೊಳ್ಳಲಿವೆ ಎಂಬ ವರದಿಯನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿ ಜತೆಗೂ ಜೆಡಿಎಸ್ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದರು.
ಈ ಹಿಂದೆ ಎರಡೂ ರಾಷ್ಟ್ರೀಯ ಪಕ್ಷಗಳ ಸಹವಾಸ ಮಾಡಿದ್ದರಿಂದ ಸಾಕಷ್ಟು ಪೆಟ್ಟು ತಿಂದಿದ್ದೇವೆ. ಹೀಗಾಗಿ ಮುಂದೆ ಅಂತಹ ತಪ್ಪು$ಮಾಡುವುದಿಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂಬುದು ಜನತೆಗೆ ಅರ್ಥವಾಗಿರುವುದರಿಂದ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಎಚ್.ಡಿ. ಕುಮಾರಸ್ವಾಮಿ 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿರುವುದನ್ನು ಕಂಡಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ ಬಳಿಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಜತೆಗೆ ಎಲ್ಲಾ 224 ಕ್ಷೇತ್ರಗಳಿಗೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಒಮ್ಮೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ನಂತರ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದರು.
ಪಾಠ ಕಲಿಯಬೇಕಿಲ್ಲ: ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್ ತನ್ನ ಅಭ್ಯ ರ್ಥಿಯನ್ನು ಕಣಕ್ಕಿಳಿಸಲಿಲ್ಲ ಎಂಬ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ತಳ್ಳಿಹಾಕಿದ ದೇವೇಗೌಡ ಅವರು, ಯಡಿಯೂರಪ್ಪರಿಂದ ನಾನು ರಾಜಕೀಯ ಪಾಠ ಕಲಿಯಬೇಕಿಲ್ಲ.
ಕೇವಲ ಹತ್ತು ತಿಂಗಳ ಅವಧಿಗೆ ನಡೆದ ಈ ಉಪ ಚುನಾವಣೆಗಾಗಿ ಅಭ್ಯರ್ಥಿ ಕಣಕ್ಕಿಳಿಸಿ, ಹತ್ತಾರು ಕೋಟಿ ಹಣ ಖರ್ಚು ಮಾಡಿ ಚುನಾವಣೆ ಎದುರಿಸಬೇಕಾದ ಅಗತ್ಯ ಕಾಣಲಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುವ ಶಕ್ತಿಯೂ ನಮಗಿರಲಿಲ್ಲ ಎಂದು ಹೇಳಿದರು.
ವಿಫಲ: ರಾಜ್ಯದಲ್ಲಿ ಎದುರಾದ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭೀಕರ ಬರ ಪರಿಸ್ಥಿತಿ ಎ ದುರಾಗಿದ್ದರೂ ಅತ್ತ ಗಮನಹರಿಸದ ಸರ್ಕಾರ, ಇದೀಗ ಎಚ್ಚೆತ್ತು ಕೊಂಡು ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.