ದಾವಣಗೆರೆ: ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಸಮುದಾಯದವರ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಸೋಮವಾರ ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟಿಸಲಾಯಿತು.
ದಲಿತರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಅನೇಕ ಸಮಸ್ಯೆಗಳಿಂದ ನರಳುತ್ತಿದ್ದು, ಸಮಸ್ಯೆ ಬಗೆಹರಿಸಲು ತಕ್ಷಣ ಕ್ರಮವಹಿಸಲು ಪ್ರತಿಭಟನಾಕಾರರು ಒತ್ತಾಯಿಸಿದರು.
ತಮಕೂರು ಜಿಲ್ಲೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರದ ಲೋಕಸಭಾ ಸದಸ್ಯ ನಾರಾಯಣಸ್ವಾಮಿ ಅವರಿಗೆ ಪ್ರವೇಶ ನಿರಾಕರಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ, ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಳ್ಳಲು ಹಣಕಾಸಿನ ನೆರವು, ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನಕ್ಕೆ ಜಾಗ, ದಲಿತರ ಮೇಲಿನ ದೌರ್ಜನ್ಯ ಪ್ರಕರಣ ವಿಚಾರಣೆ ಪ್ರತಿ ತಿಂಗಳು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸುವುದು, ಬಗರ್‌ಹುಕುಂ ಸಾಗುವಳಿ ಪತ್ರ ವಿತರಣೆ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜನವಿರೋಧಿಯಾಗಿದ್ದು, ಆ ಕಾಯ್ದೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸದಿರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಉಪವಿಭಾಗಾಧಿಕಾರಿ ಮೂಲಕಮುಖ್ಯಮಂತ್ರಿಗಳಿಗೆ ಕಳಹಿಸಲು ಹಕ್ಕೊತ್ತಾಯದ ಮನವಿಯನ್ನು ಪ್ರತಿಭಟನಾಕಾರರು ಸಲ್ಲಿಸಿದರು. ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಸಿ.ಕೆ.ಮಹೇಶ್, ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್ .ನಾಗೇಶ್, ಜಿಲ್ಲಾಧ್ಯಕ್ಷ ಪಿ.ತಿಪ್ಪೇರುದ್ರಪ್ಪ, ಇತರರು ಈ ಸಂದರ್ಭದಲ್ಲಿದ್ದರು.