ಪುಂಜಾಲಕಟ್ಟೆ: ಕಲಿಕೆಯಲ್ಲಿ ಹಿಂದುಳಿದಿರುವ ಹಿನ್ನೆಲೆಯಲ್ಲಿ ಎಸೆಸೆಲ್ಸಿಯ ನಾಲ್ವರು ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗೆ ಅವಕಾಶ ನಿರಾಕರಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ 24 ಗಂಟೆಗಳೊಳಗೆ ಸ್ಪಷ್ಟೀಕರಣ ನೀಡುವಂತೆ ಆದೇಶಿಸಿದ್ದಾರೆ.
ಬಂಟ್ವಾಳ ತಾಲೂಕಿನ ಅಲ್ಲಿಪಾದೆಯ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಎಸೆಸೆಲ್ಸಿಯ ನಾಲ್ವರು ಬಾಲಕರು ಈ ಬಾರಿಯ ಅಂತಿಮ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 32 ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು, ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ ಶಾಲಾ ಆಡಳಿತ ಮಂಡಳಿಯು ಅವರನ್ನು ಅಂತಿಮ ಪರೀಕ್ಷೆಗೆ ಹಾಜರಾಗದಂತೆ ನಿರ್ಧಾರ ಕೈಗೊಂಡಿದೆ. ಈ ನಾಲ್ವರ ಹೆಸರನ್ನು ನೋಂದಣಿ ಮಾಡಿರಲಿಲ್ಲ. ಹೀಗಾಗಿ ಗುರುವಾರ ಆರಂಭಗೊಂಡ ಅಂತಿಮ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ದೊರೆಯದ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ.
ಈ ವಿಚಾರವಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳ ಪೊಷಕರಿಂದ ಯಾವುದೇ ದೂರು ಬಂದಿಲ್ಲ. ಘಟನೆಯ ಬಗ್ಗೆ ಮಾಹಿತಿ ತಿಳಿದ ಬಳಿಕ ಶಾಲೆಗೆ ತೆರಳಿ ಮಾಹಿತಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕರೊಂದಿಗೆ ಮಾತುಕತೆ ನಡೆಸಲಾಗಿದೆ. ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಒಂದು ದಿನದೊಳಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಲಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್. ತಿಳಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದು, ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ ನೊಂದಾವಣೆ ಮಾಡಿರಲಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಕಲಿಕಾ ಹಿತದೃಷ್ಟಿಯಿಂದ ಪೋಷಕರ ಸಹಮತದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಶಾಲಾ ಮುಖ್ಯ ಶಿಕ್ಷಕಿ ಸಿ| ಶಾಲಿನಿ ಸ್ಪಷ್ಟಪಡಿಸಿದ್ದಾರೆ.