ಮುಂಬಯಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರದಲ್ಲಿ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಒಡಕಿನ ಧ್ವನಿ ಕೇಳಿಬಂದಿದೆ.
ಈ ಮೂಲಕ ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬು ದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.
ಕಂದಾಯ ಸಚಿವ ಅಶೋಕ್ ಚವಾಣ್, ರವಿವಾರ ಮೈತ್ರಿ ಸರಕಾರದ ಬಗ್ಗೆ ಬಹಿರಂಗವಾಗಿ ಅಸಮಾಧಾನವನ್ನು ಹೊರ ಹಾಕಿದ್ದಾರೆ.
‘ಮಹಾರಾಷ್ಟ್ರ ವಿಕಾಸ ಅಘಾಡಿ ಮೈತ್ರಿ ಹಾಗೂ ಆಡಳಿತ ವಿಚಾರವಾಗಿ ನಮಗೆ (ಕಾಂಗ್ರೆಸ್) ಕೆಲವು ಭಿನ್ನಾಭಿಪ್ರಾಯಗಳು ಇವೆ. ಈ ಎಲ್ಲ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಚರ್ಚೆ ನಡೆಸಲಾಗುವುದು. ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿಗಳ ಜೊತೆ ಕಾಂಗ್ರೆಸ್ ಸಭೆ ನಡೆಸಲಿದೆ’ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಕಾಸ ಅಘಾಡಿ ಸರಕಾರದಲ್ಲಿ ನಿರ್ಣಾಯಕ ನಿರ್ಧಾರಗಳನ್ನು ಕೈಗೊಳ್ಳುವಾಗ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ.
ಎಲ್ಲ ವಿಷಯಗಳ ಬಗ್ಗೆಯೂ ಎನ್‌ಸಿಪಿ ನೇತಾರ ಶರದ್ ಪವಾರ್ ಜತೆಗೆ ಉದ್ಧವ್ ಠಾಕ್ರೆ ಚರ್ಚೆ ನಡೆಸುತ್ತಾರೆ. ಇದರಲ್ಲಿ ಕಾಂಗ್ರೆಸ್ ಪಕ್ಷವನ್ನು ಭಾಗೀದಾರವನ್ನಾಗಿ ಮಾಡಿಕೊಳ್ಳುವುದಿಲ್ಲ.
ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‌ಗೆ ಸಮಾನ ಅವಕಾಶ ನೀಡುತ್ತಿಲ್ಲ ಎಂಬ ದೂರುಗಳು ಈಗಾಗಲೇ ಕೇಳಿಬಂದಿವೆ. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈ ಹಿಂದೆ ಬಹಿರಂಗವಾಗಿ ಅಸಮಾಧಾನವನ್ನು ಹೊರ ಹಾಕಿದ್ದರು.