ಬೆಂಗಳೂರು: ಚಿತ್ರನಟಿ ರಮ್ಯಾ ಅವರನ್ನು ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸುವ ಚನ್ನಪಟ್ಟಣ ಅಥವಾ ಕಂದಾಯ ಸಚಿವ ಆರ್.ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರದಿಂದ ಕಣಕ್ಕಿಳಿಸಲು ಚರ್ಚೆ ನಡೆಸಲಾಗಿದೆ.
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಪ್ರಯತ್ನ ನಡೆದಿದ್ದು ಅವರು ಒಪ್ಪದಿದ್ದರೆ ಚನ್ನಪಟ್ಟಣ ಕ್ಷೇತ್ರದಿಂದ ರಮ್ಯಾ ಅವರನ್ನೇ ಕಣಕ್ಕಿಳಿಸುವುದು ಸೂಕ್ತ ಎಂದು ನಿರ್ಧರಿಸಲಾಗಿದೆ.
ಯೋಗೇಶ್ವರ್ ಕಾಂಗ್ರೆಸ್‌ಗೆ ಬಂದರೆ ಪದ್ಮನಾಭನಗರ ಅಥವಾ ಮಂಡ್ಯದಿಂದ ಕಣಕ್ಕಿಳಿಸಬಹುದು ಎಂದೂ ಚರ್ಚೆ ಸಂದರ್ಭದಲ್ಲಿ ಪ್ರಸ್ತಾಪವಾಗಿದೆ ಎಂದು ಮೂಲಗಳು ತಿಳಿಸಿವೆ.
2009ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಚೆಲುವರಾಯಸ್ವಾಮಿ 2013ರ ವಿಧಾನಸಭೆ ಚುನಾವಣೆಯಲ್ಲಿ ನಾಗಮಂಗಲದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ಮಂಡ್ಯ ಲೋಕಸಭೆ ಕ್ಷೇತ್ರ ತೆರವಾಗಿತ್ತು.
ಆಗ ನಡೆದ ಉಪ ಉಪ ಚುನಾವಣೆಯಲ್ಲಿ ರಮ್ಯಾ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಜೆಡಿಎಸ್‌ನ ಸಿ.ಎಸ್.ಪುಟ್ಟರಾಜು ವಿರುದ್ಧ ಗೆಲುವು ಸಾಧಿಸಿದ್ದರು. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಪುಟ್ಟರಾಜು ವಿರುದ್ಧ ಸೋಲು ಅನುಭವಿಸಿದ್ದರು. ಕಾಂಗ್ರೆಸ್‌ನ ರಾಷ್ಟ್ರೀಯ ಸಾಮಾಜಿಕ ಜಾಲತಾಣ ತಂಡದಲ್ಲೂ ಕೆಲಕಾಲ ಕಾರ್ಯನಿರ್ವಹಿಸಿದ್ದರು.
ಆ ನಂತರ ಇದ್ದಕ್ಕಿದ್ದಂತೆ ರಾಜಕಾರಣದಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು. ಇತ್ತೀಚೆಗೆ ರಾಹುಲ್‌ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಾಣಿಸಿಕೊಂಡಿದ್ದರು. ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದರಿಂದ ಮತ್ತೆ ರಮ್ಯಾ ಹೆಸರು ಚಾಲ್ತಿಗೆ ಬಂದಿತ್ತು. ಮಂಡ್ಯ ಲೋಕಸಭೆ ಕ್ಷೇತ್ರದಿಂದ 2024ರಲ್ಲಿ ಸ್ಪರ್ಧೆ ಮಾಡಬಹುದೆಂಬ ಮಾತುಗಳು ಕೇಳಿಬಂದಿದ್ದವು.