ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಶುಕ್ರವಾರದ (ಅ.5) ಬಳಿಕ ವಾಯುಭಾರ ಕುಸಿತ ಉಂಟಾಗಲಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವುದರಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದ ಅಂಡಮಾನ್ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ಈಗಾಗಲೇ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಶುಕ್ರವಾರದ ವೇಳೆ ತೀವ್ರ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಅದರ ಪ್ರಭಾವ ಸಮುದ್ರದ ಮೇಲೆ ಹೆಚ್ಚಾಗಿದ್ದು, ಮಾರುತಗಳು ವೇಗ ಪಡೆದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿಯೂ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮವಾಗಿ ಬುಧವಾರ ಹಾಗೂ ಗುರುವಾರ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಕ್ಷೀಣಿಸುತ್ತಿರುವುದರಿಂದ ಎರಡು ಮೂರು ದಿನಗಳು ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.
ಆದರೆ, ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಸಂಭವಿಸಲಿದೆ ಎನ್ನಲಾಗಿರುವ ವಾಯುಭಾರ ಕುಸಿತವು ಮುಂದಿನ ಎರಡು ಮೂರು ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಆದರೆ, ಆ ವೇಳೆಗಾಗಲೇ ಅದು ಓಮಾನ್ ಕಡೆಗೆ ಚಲಿಸುವುದರಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಆದರೆ, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದರೊಂದಿಗೆ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾದರೆ ಸಮುದ್ರದ ಅಲೆಗಳ ಉಬ್ಬರವಿಳಿದ ಹೆಚ್ಚಲಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಸಮುದ್ರಕ್ಕೆ ಇಳಿದಿರುವ ಮೀನುಗಾರರಿಗೆ ವಾಪಸ್ ಬರುವಂತೆ ಹಾಗೂ ಅ.10ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
“”ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ತೀವ್ರ ಪ್ರಮಾಣದ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯೆತೆಯಿದೆ. ಅದರಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ತಮಿಳುನಾಡು ಹಾಗೂ ಕೇರಳ ಭಾಗಗಳಿಗೆ ಹೆಚ್ಚು ಹಾನಿಯುಂಟು ಮಾಡುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ಹೇಳಿದ್ದಾರೆ.